ಲಖನೌ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪ್ರತಿಪಕ್ಷಗಳ ಒಗ್ಗಟ್ಟು ಬಯಸುತ್ತಿದೆ. “ಪ್ರಧಾನಿ ಅಭ್ಯರ್ಥಿ ಬಗ್ಗೆ ನಾವು ಯೋಚಿಸಿಲ್ಲ. ಪ್ರತಿಪಕ್ಷಗಳ ಒಗ್ಗಟ್ಟು ಮುಖ್ಯ” ಎಂದು ಇತ್ತೀಚೆಗಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್ಸಿನ ಒಗ್ಗಟ್ಟಿನ ಮಂತ್ರಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರು ತಣ್ಣೀರೆರಚಿದ್ದಾರೆ.
ಅಮೇಥಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈಗಿರುವ ಮೈತ್ರಿಯೇ ಮುಂದುವರಿಯುತ್ತದೆ” ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೂ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಹಾಗಾಗಿ, ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಎಂಬ ಕಾಂಗ್ರೆಸ್ ಆಶಯಕ್ಕೆ ಧಕ್ಕೆಯಾದಂತಾಗಿದೆ.
ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿಯಿಲ್ಲ, ಏಕಾಂಗಿ ಸ್ಪರ್ಧೆ; ಸ್ಪಷ್ಟಪಡಿಸಿದ ಮಮತಾ ಬ್ಯಾನರ್ಜಿ
ಅಮೇಥಿಯಲ್ಲಿ ಎಸ್‌ಪಿ ಸ್ಪರ್ಧೆ ಸುಳಿವು ನೀಡಿದ ಯಾದವ್
ಉತ್ತರ ಪ್ರದೇಶದ ಅಮೇಥಿ ಲೋಕಸಭೆ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಸ್ಪರ್ಧೆಯ ಕುರಿತು ಅಖಿಲೇಶ್ ಯಾದವ್ ಸುಳಿವು ನೀಡಿದ್ದಾರೆ. “ಅಮೇಥಿಯಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಗೆದ್ದಿದ್ದಾರೆ, ಸೋತಿದ್ದಾರೆ. ಆದರೆ, ಮುಂದಿನ ಚುನಾವಣೆಯಲ್ಲಿ ಜನರ ಹೃದಯದಲ್ಲಿ ದೊಡ್ಡ ಸ್ಥಾನ ಪಡೆದವರು ಅಮೇಥಿಯಲ್ಲಿ ಸ್ಪರ್ಧಿಸಲಿದ್ದಾರೆ” ಎಂದು ಹೇಳಿದರು. ಕಳೆದ ಬಾರಿ ಬಿಜೆಪಿಯ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿ ಅವರನ್ನು ಅಮೇಥಿಯಲ್ಲಿ ಸೋಲಿಸಿದ್ದರು.