Site icon Vistara News

Arvind Kejriwal: ದೆಹಲಿ ಅಬಕಾರಿ ನೀತಿ ಕೇಸ್‌ನಲ್ಲಿ ಕೇಜ್ರಿವಾಲ್‌ಗೆ ಜಾಮೀನು, ತುಸು ರಿಲೀಫ್

Arvind Kejriwal

Arvind Kejriwal gets bail from court after skipping probe agency summons

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ತುಸು ರಿಲೀಫ್‌ ಸಿಕ್ಕಿದೆ. ಎಂಟು ಬಾರಿ ಸಮನ್ಸ್‌ (ED Summons) ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ದಾಖಲಿಸಿದ ಕೇಸ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಇ.ಡಿ ಸಮನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಬಾರಿ ರೋಸ್‌ ಅವೆನ್ಯೂ ಕೋರ್ಟ್‌ ವಿಚಾರಣೆಗೆ ಅರವಿಂದ್‌ ಕೇಜ್ರಿವಾಲ್‌ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿದ್ದರು. ಶನಿವಾರ (ಮಾರ್ಚ್‌ 16) ಅವರು ಖುದ್ದು ನ್ಯಾಯಾಲಯಕ್ಕೆ ಹಾಜರಾದರು. ಇದೇ ವೇಳೆ ರೋಸ್‌ ಅವೆನ್ಯೂ ನ್ಯಾಯಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ. 15 ಸಾವಿರ ರೂ. ಮೌಲ್ಯದ ಶೂರಿಟಿ ಬಾಂಡ್‌ ಹಾಗೂ 1 ಲಕ್ಷ ರೂ. ಮೌಲ್ಯದ ಪರ್ಸನಲ್‌ ಬಾಂಡ್‌ ಬರೆಸಿಕೊಂಡು ಜಾಮೀನು ನೀಡಿದೆ.

ಅಬಕಾರಿ ನೀತಿ ಜಾರಿ ವೇಳೆ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇದುವರೆಗೆ ಅರವಿಂದ್‌ ಕೇಜ್ರಿವಾಲ್‌ ಅವರಿಗೆ 8 ಬಾರಿ ಸಮನ್ಸ್‌ ಜಾರಿ ಮಾಡಿದೆ. ಇಷ್ಟಾದರೂ, ಅರವಿಂದ್‌ ಕೇಜ್ರಿವಾಲ್‌ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ, ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮತ್ತೊಂದೆಡೆ, “ಇ.ಡಿ ಅಧಿಕಾರಿಗಳು ನೀಡುತ್ತಿರುವ ಸಮನ್ಸ್‌ ಕಾನೂನುಬಾಹಿರವಾಗಿದೆ” ಎಂದು ಆಮ್‌ ಆದ್ಮಿ ಪಕ್ಷವು ಟೀಕಿಸಿದೆ.

ಇದನ್ನೂ ಓದಿ: Arvind Kejriwal: 9 ಉಚಿತ ಗ್ಯಾರಂಟಿಗಳೊಂದಿಗೆ ಚುನಾವಣಾ ರಣಕಹಳೆ ಊದಿದ ಅರವಿಂದ ಕೇಜ್ರಿವಾಲ್‌

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version