Site icon Vistara News

ಜಾಮೀನಿನ ಬೆನ್ನಲ್ಲೇ ಕೇಜ್ರಿವಾಲ್‌ಗೆ ಮತ್ತೆ ಸಂಕಷ್ಟ; ಹೊಸ ಕೇಸ್‌ ಜತೆಗೆ ಇ.ಡಿ 9ನೇ ಸಮನ್ಸ್‌ ಜಾರಿ

Arvind Kejriwal

Delhi CM Arvind Kejriwal withdraws from Supreme Court his plea against arrest by ED

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ದೂರು ದಾಖಲಿಸಿದ ಬಳಿಕ ಜಾಮೀನು ಪಡೆದುಕೊಂಡು ತುಸು ನಿರಾಳರಾಗಿದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹೊಸ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಸಮನ್ಸ್‌ (ED Summons) ನೀಡಿದ್ದಾರೆ. ಅಷ್ಟೇ ಅಲ್ಲ, ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ದೆಹಲಿ ಸಿಎಂಗೆ 9ನೇ ಸಮನ್ಸ್‌ ಜಾರಿಗೊಳಿಸಿದೆ.

ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಜಲಮಂಡಳಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಮಾರ್ಚ್‌ 18ರಂದು ವಿಚಾರಣೆಗೆ ಹಾಜರಾಗಬೇಕಿದೆ. ಇನ್ನು, ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್‌ 21ರಂದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಇ.ಡಿ ಅಧಿಕಾರಿಗಳು ಸೂಚಿಸಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಇ.ಡಿ ಎಂಟು ಬಾರಿ ಸಮನ್ಸ್‌ ನೀಡಿದ್ದರೂ ಕೇಜ್ರಿವಾಲ್‌ ಅವರು ವಿಚಾರಣೆಗೆ ಹಾಜರಾಗಿಲ್ಲ.

ಕೆಂಡವಾದ ಆಮ್‌ ಆದ್ಮಿ ಪಕ್ಷ

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಲಮಂಡಳಿ ಪ್ರಕರಣದಲ್ಲಿ ಸಮನ್ಸ್‌ ನೀಡುತ್ತಲೇ ಆಮ್‌ ಆದ್ಮಿ ಪಕ್ಷ ಕೆಂಡವಾಗಿದೆ. “ದೆಹಲಿ ಜಲಮಂಡಳಿ ತನಿಖೆ ವಿಚಾರದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಇ.ಡಿ ಸಮನ್ಸ್‌ ನೀಡಿದೆ. ಜಲಮಂಡಳಿ ಪ್ರಕರಣದಲ್ಲಿ ಇ.ಡಿ ಕೇಸ್‌ ದಾಖಲಿಸಿರುವುದೇ ನಮಗೆ ಗೊತ್ತಿಲ್ಲ. ಮತ್ತೊಂದು ನಕಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಮನ್ಸ್‌ ನೀಡಿದೆ” ಎಂದು ಆಮ್‌ ಆದ್ಮಿ ಪಕ್ಷದ ನಾಯಕಿ ಆತಿಶಿ ಸುದ್ದಿಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Arvind Kejriwal: ದೆಹಲಿ ಅಬಕಾರಿ ನೀತಿ ಕೇಸ್‌ನಲ್ಲಿ ಕೇಜ್ರಿವಾಲ್‌ಗೆ ಜಾಮೀನು, ತುಸು ರಿಲೀಫ್

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version