ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಮತ್ತೆ ಜೈಲೂಟವೇ ಗತಿಯಾಗಿದೆ. ಇ.ಡಿ ಅಧಿಕಾರಿಗಳಿಂದ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಅಲ್ಲೂ ಅವರಿಗೆ ಹಿನ್ನಡೆಯಾಗಿದೆ. ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ನಕಾರ ವ್ಯಕ್ತಪಡಿಸಿದೆ.
“ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ಸೋಮವಾರದೊಳಗೆ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಅವರ ಅರ್ಜಿಯ ವಿಚಾರಣೆಗೆ ಯಾವುದೇ ವಿಶೇಷ ಪೀಠದ ಲಭ್ಯತೆ ಇಲ್ಲ. ಹಾಗಾಗಿ, ಸೋಮವಾರದೊಳಗೆ ಅರ್ಜಿಯನ್ನು ವಿಚಾರಣೆ ನಡೆಸಲು ಆಗುವುದಿಲ್ಲ” ಎಂದು ಕೋರ್ಟ್ ತಿಳಿಸಿತು. ಇ.ಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏಪ್ರಿಲ್ 9) ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದರಿಂದಾಗಿ ಕೇಜ್ರಿವಾಲ್ ಅವರೀಗ ಏಪ್ರಿಲ್ 15ರವರೆಗೆ ತಿಹಾರ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ: Arvind Kejriwal: ತಿಹಾರ್ ಜೈಲಿನಲ್ಲಿ ಅರವಿಂದ ಕೇಜ್ರಿವಾಲ್ ಫಸ್ಟ್ ನೈಟ್ ಹೇಗಿತ್ತು?