ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನು ಅರ್ಜಿ ಮತ್ತೆ ವಜಾಗೊಳಿಸಿದೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ಜೂ.19ವರೆಗೆ ವಿಸ್ತರಿಸಿದೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಈ ನಿಟ್ಟಿನಲ್ಲಿ ಜಾಮೀನು ಅವಧಿಯನ್ನು ಏಳು ದಿನ ವಿಸ್ತರಿಸುವಂತೆ ಈ ಹಿಂದೆ ಅರವಿಂದ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದ ಕಾರಣ ಕೇಜ್ರಿವಾಲ್ ತಿಹಾರ್ ಜೈಲಿಗೆ ಮರಳಬೇಕಾಯಿತು. ಇಂದು ದಿಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಕಾವೇರಿ ಭವೇಜಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. ಇನ್ನು ಕೇಜ್ರಿವಾಲ್‌ಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ತಪಾಸಣೆಯನ್ನು ನಡೆಸುವಂತೆ ಕೋರ್ಟ್ ಆದೇಶಿಸಿದೆ. ಇಂದು ಕೇಜ್ರಿವಾಲ್ ವರ್ಚುವಲ್ ಸೌಲಭ್ಯದ ಮೂಲಕ ಕೋರ್ಟ್‌ಗೆ ಹಾಜರಾಗಿದ್ದರು.
Rouse Avenue Court dismisses the interim bail plea moved by Delhi CM Arvind Kejriwal seeking 7 days bail cited medical reasons, in Excise Policy money laundering case. Meanwhile, the Court has directed the concerned authorities to conduct of required medical tests.
— ANI (@ANI) June 5, 2024
ಪ್ರಕರಣದ ಹಿನ್ನೆಲೆ
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್ ಈ ಹಿಂದೆಯೇ ಆದೇಶಿಸಿತ್ತು.