ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರೀಗ ಸಿಬಿಐ ಕಸ್ಟಡಿಯಲ್ಲಿದ್ದಾರೆ. ಮೂರು ದಿನ ಸಿಬಿಐ ಕಸ್ಟಡಿಗೆ ವಹಿಸಿ ಬುಧವಾರ (ಜೂನ್ 26) ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅರವಿಂದ್ ಕೇಜ್ರಿವಾಲ್ ಅವರು ಕೋರ್ಟ್‌ಗೆ ವಿಶೇಷ ಮನವಿ ಮಾಡಿದ್ದಾರೆ. “ತಿಹಾರ ಜೈಲಿಗೆ ಹೋಗುವಾಗ ಪ್ಯಾಂಟ್ ಹಿಡಿದುಕೊಂಡೇ ಹೋಗಬೇಕಾಗಿದೆ. ಹಾಗಾಗಿ, ನನಗೊಂದು ಬೆಲ್ಟ್ ಬಳಸಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಲಯವು ಅನುಮತಿ ನೀಡಿದೆ.
ಅರವಿಂದ್ ಕೇಜ್ರಿವಾಲ್ ಅವರು ಸಿಬಿಐ ಕಸ್ಟಡಿಯಲ್ಲಿರುವಾಗ ಮನೆಯಿಂದ ತರುವ ಊಟ ಮಾಡಬಹುದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಬಹುದು ಹಾಗೂ ಪ್ರತಿ ದಿನ ಅರ್ಧ ಗಂಟೆ ಪತ್ನಿಯನ್ನು ಮತ್ತು ಇನ್ನರ್ಧ ಗಂಟೆ ವಕೀಲರನ್ನು ಭೇಟಿಯಾಗಬಹುದು ಎಂದು ಅನುಮತಿ ನೀಡಿದೆ. ಹಾಗೆಯೇ, ಓದಲು ಭಗವದ್ಗೀತೆ, ಒಂದು ಬೆಲ್ಟ್ ಬಳಕೆ ಮಾಡಲು ಕೂಡ ರೋಸ್ ಅವೆನ್ಯೂ ಕೋರ್ಟ್ ಸಮ್ಮತಿ ಸೂಚಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮನೆಯ ಊಟ ಸೇವಿಸಲು ಅನಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.
ಇದನ್ನೂ ಓದಿ: Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ