Site icon Vistara News

Arvind Kejriwal: ಬಂಧನ ಪ್ರಶ್ನಿಸಿದ ಅರವಿಂದ ಕೇಜ್ರಿವಾಲ್‌ ಅರ್ಜಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

arvind kejriwal in tihar jail

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ (Delhi excise policy case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ.

ಏಪ್ರಿಲ್ 9ರಂದು ತಮ್ಮ ಮನವಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮುಂಬರುವ ಲೋಕಸಭೆ ಚುನಾವಣೆಯ ನಡುವೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂಬ ಅವರ ವಾದವನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ದೆಹಲಿ ಉಚ್ಚ ನ್ಯಾಯಾಲಯದ ಪ್ರಕಾರ, ತನಿಖಾ ಸಂಸ್ಥೆಯು ಬಂಧನವನ್ನು ಸಮರ್ಥಿಸಲು ಸಾಕಷ್ಟು ಸಾಕ್ಷಿಗಳಿವೆ. ಇದು ಇಡಿ ಜೊತೆಗಿನ ಕೇಜ್ರಿವಾಲ್‌ ಅವರ “ಅಸಹಕಾರದ ಅನಿವಾರ್ಯ ಪರಿಣಾಮ” ಎಂದಿತ್ತು. ವಿಶೇಷವೆಂದರೆ, ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ಅರವಿಂದ್ ಕೇಜ್ರಿವಾಲ್ ಅವರಿಗೆ ಒಂಬತ್ತು ಬಾರಿ ಸಮನ್ಸ್ ನೀಡಿತ್ತು. ಆದರೆ ಅವರು ಒಂದಕ್ಕೂ ಸ್ಪಂದಿಸಿರಲಿಲ್ಲ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಏಕಸದಸ್ಯ ಪೀಠದ 103 ಪುಟಗಳ ತೀರ್ಪಿನಲ್ಲಿ ಮುಖ್ಯಮಂತ್ರಿಯ ಬಂಧನದ ಸಮಯದ ಕುರಿತು ತನಿಖಾ ಸಂಸ್ಥೆಯನ್ನು ದೂಷಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಎಎಪಿ ನಾಯಕನನ್ನು ಮಾರ್ಚ್ 21ರಂದು ಬಂಧಿಸಲಾಯಿತು. ಕೊನೆಯ ವಿಚಾರಣೆಯಲ್ಲಿ ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೊದಲ ಹಾಲಿ ಸಿಎಂ ಅವರು. ಸದ್ಯ ಸಿಎಂ ತಿಹಾರ್ ಜೈಲಿನಲ್ಲಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹೊರತುಪಡಿಸಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಕಳೆದ ವರ್ಷ ಫೆಬ್ರವರಿಯಿಂದ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಸಂಜಯ್ ಸಿಂಗ್ ಕೂಡ ಬಂಧಿತನಾಗಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: Aravind Kejriwal : ಕೇಜ್ರಿವಾಲ್​ಗೆ ಮತ್ತಷ್ಟು ಹಿನ್ನಡೆ; ಆಪ್ತ ಕಾರ್ಯದರ್ಶಿ ವಜಾ

Exit mobile version