ಲಖನೌ: ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ (Gyanvapi Case) ಅಲಹಾಬಾದ್ ಹೈಕೋರ್ಟ್ ಕೂಡ ಸಮ್ಮತಿ ಸೂಚಿಸಿದೆ. ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಐಎಸ್‌ಐ) ಸಮೀಕ್ಷೆಗೆ ಅನುಮತಿ ನೀಡಿದ್ದ ವಾರಾಣಸಿ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮುಸ್ಲಿಮರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
“ವಾರಾಣಸಿ ನ್ಯಾಯಾಲಯ ನೀಡಿದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಜ್ಞಾನವಾಪಿ ಮಸೀದಿಯಲ್ಲಿ ಐಎಸ್‌ಐ ಸಮೀಕ್ಷೆ ಮುಂದುವರಿಯಲಿದೆ” ಎಂದು ಹಿಂದುಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾಹಿತಿ ನೀಡಿದರು. ವೈಜ್ಞಾನಿಕ ಸಮೀಕ್ಷೆ ವೇಳೆ ಉತ್ಖನನ ಮಾಡಬಾರದು, ಮಸೀದಿಗೆ ಯಾವುದೇ ಹಾನಿಯಾಗಬಾರದು ಎಂಬುದಾಗಿ ಕೋರ್ಟ್ ಸೂಚಿಸಿದೆ. ಇನ್ನು, ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮಸೀದಿ ಸಮಿತಿ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ಜುಲೈ 21ರಂದು ವಾರಾಣಸಿ ನ್ಯಾಯಾಲಯವು ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಅದರಂತೆ ಮಸೀದಿಯಲ್ಲಿ ಐಎಸ್‌ಐ ಜುಲೈ 24ರಂದು ಸಮೀಕ್ಷೆ ಆರಂಭಿಸಿತ್ತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್ ಸಮೀಕ್ಷೆಗೆ ತಡೆಯಾಜ್ಞೆ ನೀಡಿದ್ದಲ್ಲದೆ, ಮುಸ್ಲಿಂ ಅರ್ಜಿದಾರರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿತ್ತು. ಅದರಂತೆ, ಅಂಜುಮಾನ್ ಇಂತೇಜಾಮಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಸಮೀಕ್ಷೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿತ್ತು. ಈಗ ಅಲಹಾಬಾದ್ ಹೈಕೋರ್ಟ್ ಸಮೀಕ್ಷೆಗೆ ಅನುಮತಿ ನೀಡಿದೆ.
ಇದನ್ನೂ ಓದಿ: Gyanvapi Case: ಮುಸ್ಲಿಮರು ಐತಿಹಾಸಿಕ ಪ್ರಮಾದವನ್ನು ಒಪ್ಪಿಕೊಳ್ಳಲಿ: ಜ್ಞಾನವಾಪಿ ಬಗ್ಗೆ ಯುಪಿ ಸಿಎಂ ಯೋಗಿ
ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿ ಹಿಂದು ಮಹಿಳೆಯರು 2021ರಲ್ಲಿ ವಾರಾಣಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಬಳಿಕ ನ್ಯಾಯಾಲಯವು ಮಸೀದಿಯಲ್ಲಿ ವಿಡಿಯೊ ಸಮೀಕ್ಷೆಗೆ ಅನುಮತಿ ನೀಡಿತ್ತು. ಈಗಾಗಲೇ, ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆ ಮುಗಿದಿದ್ದು, ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗ ಪತ್ತೆಯಾದ ಕಾರಣ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಲಾಗಿದೆ.