ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ (Election Results 2023) ಸ್ಪಷ್ಟ ಚಿತ್ರಣ ದೊರೆಯುತ್ತಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಇನ್ನು ಛತ್ತೀಸ್‌ಗಢದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಇದೆ. ಇದರ ಬೆನ್ನಲ್ಲೇ, ಭಾನುವಾರ ಸಂಜೆ (ಡಿಸೆಂಬರ್ 3) ದೆಹಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಏರುವುದು ಬಹುತೇಕ ನಿಶ್ಚಿತವಾಗಿದೆ. ಹಾಗಾಗಿ, ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಭಾನುವಾರ ಸಂಜೆ 5 ಗಂಟೆಯಿಂದಲೇ ಸಂಭ್ರಮಾಚರಣೆ ಆರಂಭವಾಗಲಿದೆ. ಸಿಹಿ ಹಂಚಿ, ಸಂಪ್ರದಾಯಿಕ ನೃತ್ಯ ಮಾಡಿ ಸಂಭ್ರಮಾಚರಣೆ ಮಾಡಲಾಗುತ್ತದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಂಜೆ 6.30ಕ್ಕೆ ಕಚೇರಿಗೆ ಆಗಮಿಸಲಿದ್ದಾರೆ. ಇದೇ ವೇಳೆ ಅವರು ಸಂಭ್ರಮಾಚರಣೆಯಲ್ಲಿ ಭಾಗವಹಿಸುವ ಜತೆಗೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
#WATCH | Rajasthan BJP cadre celebrate party's lead in state elections, in Jaipur pic.twitter.com/WzqB4lVrZe
— ANI (@ANI) December 3, 2023
ಮಧ್ಯಪ್ರದೇಶದ ಒಟ್ಟು 230 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 116ರ ಮ್ಯಾಜಿಕ್ ನಂಬರ್ ಗಡಿ ದಾಟಿರುವ ಕಾರಣ ಗೆಲುವು ನಿಶ್ಚಿತವಾಗಿದೆ. ಇನ್ನು ರಾಜಸ್ಥಾನದಲ್ಲಿ 199 ಕ್ಷೇತ್ರಗಳ ಪೈಕಿ ಬಿಜೆಪಿಯು 109 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 74ರಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿಯೂ ಬಿಜೆಪಿಯು 100ರ ಮ್ಯಾಜಿಕ್ ನಂಬರ್ ಗಡಿ ದಾಟುವುದು ನಿಶ್ಚಿತವಾಗಿದೆ. ಅತ್ತ, ತೆಲಂಗಾಣದಲ್ಲಿ ಭರ್ಜರಿ ಗೆಲುವಿನತ್ತ ಮುನ್ನುಗ್ಗುತ್ತಿರುವ ಕಾರಣ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೆ, ಭಾನುವಾರ ಸಂಜೆಯೇ ಇಂಡಿಯಾ ಒಕ್ಕೂಟದ ಸಭೆ ಕೂಡ ಕರೆಯಲಾಗಿದೆ ಎಂದು ತಿಳಿದುಬಂದಿದೆ.
ಗೆಲುವಿನ ಕುರಿತು ಚೌಹಾಣ್ ಪ್ರತಿಕ್ರಿಯೆ
ಇದನ್ನೂ ಓದಿ: Telangana Election Results: ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ‘ಗ್ಯಾರಂಟಿ’ ವರದಾನ; ಗೆಲುವಿನ ಸೋಪಾನ
ಛತ್ತೀಸ್‌ಗಢ 11, ಮಧ್ಯಪ್ರದೇಶ 29, ಮಿಜೋರಾಂ 1, ರಾಜಸ್ಥಾನ 25 ಹಾಗೂ ತೆಲಂಗಾಣದ 17 ಲೋಕಸಭೆ ಕ್ಷೇತ್ರ ಸೇರಿ ಐದೂ ರಾಜ್ಯಗಳಲ್ಲಿ ಒಟ್ಟು 83 ಲೋಕಸಭೆ ಕ್ಷೇತ್ರಗಳಿವೆ. ಈ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಸಾಧ್ಯವಾಗಲಿದೆ. ಹಾಗೆಯೇ, ಜನರ ಒಲವು ಯಾವ ಪಕ್ಷದ ಕಡೆ ಇದೆ ಎಂಬುದರ ಮುನ್ಸೂಚನೆಯು ವಿಧಾನಸಭೆ ಚುನಾವಣೆಯಲ್ಲಿಯೇ ತಿಳಿಯಲಿದೆ. ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುನ್ನುಡಿ ಬರೆಯಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023