Site icon Vistara News

Ayodhya Ram Mandir: ರಾಮಮಂದಿರ ಪ್ರಾಣ ಪ್ರತಿಷ್ಠೆ ದಿನ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

ayodhya ram mandir

ಹೊಸದಿಲ್ಲಿ: ಅಯೋಧ್ಯೆಯ ರಾಮ ಮಂದಿರದ (Ayodhya Ram Mandir) ಪ್ರಾಣ ಪ್ರತಿಷ್ಠಾಪನೆಯ (Pran Pratishta) ದಿನವಾದ ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು (Central govt offices) ಅರ್ಧ ದಿನ ಮುಚ್ಚಲಾಗುವುದು (half day leave) ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ ತಿಳಿಸಿದ್ದಾರೆ.

ದೇಶದ ಜನತೆಯ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಕಚೇರಿ ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. “ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠೆಯನ್ನು ಭಾರತದಾದ್ಯಂತ 22ನೇ ಜನವರಿ 2024ರಂದು ಆಚರಿಸಲಾಗುತ್ತದೆ. ಆಚರಣೆಯಲ್ಲಿ ಭಾಗವಹಿಸಲು ನೌಕರರನ್ನು ಸಕ್ರಿಯಗೊಳಿಸಲು, ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಮಧ್ಯಾಹ್ನ 12.40 ಗಂಟೆಯವರೆಗೆ ಅರ್ಧ ದಿನ ಮುಚ್ಚಲು ನಿರ್ಧರಿಸಲಾಗಿದೆ” ಎಂದು ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಜನವರಿ 22ರಂದು ಮಧ್ಯಾಹ್ನ 12.30ಕ್ಕೆ ರಾಮ ಮಂದಿರದ ಪ್ರಾಣ-ಪ್ರತಿಷ್ಠಾ ಸಮಾರಂಭ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಾಜದ ಎಲ್ಲಾ ವರ್ಗಗಳ ಹಲವಾರು ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಏಳು ದಿನಗಳ ಮೊದಲು ಅಂದರೆ ಜನವರಿ 16ರಂದು ಅಯೋಧ್ಯೆ ದೇವಾಲಯದ ಸಂಕೀರ್ಣದಲ್ಲಿ ಸಮಾರಂಭಗಳು ಈಗಾಗಲೇ ಪ್ರಾರಂಭವಾಗಿವೆ. ಪ್ರಾಣ-ಪ್ರತಿಷ್ಠೆಯ ಪೂರ್ವಭಾವಿಯಾಗಿ ಪ್ರತಿದಿನವೂ ವಿಶೇಷ ಆಚರಣೆಗಳನ್ನು ನಡೆಸಲಾಗುತ್ತಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ ಬುಧವಾರ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದು ಜನವರಿ 22ರಂದು ರಜೆ ನೀಡುವಂತೆ ಮನವಿ ಮಾಡಿದೆ. “ನಿಮಗೆ ತಿಳಿದಿರುವಂತೆ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯನ್ನು ಜನವರಿ 22ರಂದು ನಿಗದಿಪಡಿಸಲಾಗಿದೆ. ಈ ಕಾರ್ಯಕ್ರಮವು ದೇಶಾದ್ಯಂತ ಲಕ್ಷಾಂತರ ಜನರಿಗೆ ಅಪಾರ ಧಾರ್ಮಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಇದು ರಾಷ್ಟ್ರದ ರೂಪಿಸುವಿಕೆಯಲ್ಲಿ ಪ್ರಮುಖವಾದ ಕಾನೂನು ಪ್ರಕ್ರಿಯೆಯ ಗರಿಷ್ಠ ಪಾಲುದಾರಿಕೆಯನ್ನು ಗುರುತಿಸುತ್ತದೆ” ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Ayodhya Ram Temple: ರಾಮ ದರ್ಬಾರ್, ಸೀತಾ ಕೂಪ… ಅಯೋಧ್ಯೆ ರಾಮ ಮಂದಿರದಲ್ಲಿ ಏನೇನಿದೆ? ಚಿತ್ರಗಳು ಇಲ್ಲಿವೆ

Exit mobile version