ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ (Ayodhya Ram Mandir)ದಲ್ಲಿ ಜನವರಿ 22ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಇದಕ್ಕಾಗಿ ಸಿದ್ಧತೆ ಕೈಗೊಳ್ಳಲಾಗಿದೆ. ಇಡೀ ದೇಶವೇ ಇಂತಹದ್ದೊಂದು ಅಪೂರ್ವ ಘಳಿಗೆಗೆ ಸಾಕ್ಷಿಯಾಗಲು ಕಾದು ಕುಳಿತಿದೆ. ಸಾವಿರಾರು ಭಕ್ತರು ಅಯೋಧ್ಯೆಯತ್ತ ಮುಖ ಮಾಡಿದ್ದಾರೆ. ಈ ಮಧ್ಯೆ ರಾಮ ಮಂದಿರ ಉದ್ಘಾಟನೆಯ ಆಹ್ವಾನವನ್ನು ಶಿರಡಿ ಸಾಯಿಬಾಬಾ (Shirdi Sai Baba) ಮಂದಿರಕ್ಕೂ ಕಳುಹಿಸಲಾಗಿದೆ.
ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಬೇಕಾದ ಅತಿಥಿಗಳ ಪಟ್ಟಿಯನ್ನು ವಿಶ್ವ ಹಿಂದೂ ಪರಿಷತ್ (VHP) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಪ್ರಾಬಲ್ಯ ಹೊಂದಿರುವ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ತಂಡವು ನಿರ್ಧರಿಸುತ್ತದೆ. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈಗಾಗಲೇ ಸಿನಿಮಾ ಕಲಾವಿದರು, ರಾಜಕೀಯ ನಾಯಕರು, ಉದ್ಯಮಿಗಳು, ಕ್ರಿಡಾ ಕ್ಷೇತ್ರದ ಸಾಧಕರು ಸೇರಿ ಹಲವು ಗಣ್ಯರಿಗೆ ಆಹ್ವಾನ ಪತ್ರಿಕೆ ಕಳುಹಿಸಲಾಗಿದೆ.
ಅಡ್ವಾಣಿ ಭಾಗಿ
ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ (L.K. Advani) ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ರಾಮ ಮಂದಿರ ಹೋರಾಟದ ಮುಂಚೂಣಿಯಲ್ಲಿದ್ದ ಅಡ್ವಾಣಿ ಅಯೋಧ್ಯೆಯ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದು ವಿಎಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. 2023ರ ಡಿಸೆಂಬರ್‌ನಲ್ಲಿ ವಿಎಚ್ಪಿ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವಂತೆ ಅಡ್ವಾಣಿ (96) ಮತ್ತು ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ (89) ಅವರಿಗೆ ಆಹ್ವಾನ ಪತ್ರಿಕೆ ಕಳುಹಿಸಿತ್ತು.
ಕಾಂಗ್ರೆಸ್ ಬಹಿಷ್ಕಾರ
ಈ ಮಧ್ಯೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ತೀರ್ಮಾನಿಸಿದೆ. “ಇದು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕ್ರಮವಾಗಿರುವ ಕಾರಣ ತೆರಳುವುದಿಲ್ಲ” ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಉಚಿತ ಟಿಕೆಟ್
ಮಹತ್ವದ ಬೆಳವಣಿಗೆಯಲ್ಲಿ ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಅಯೋಧ್ಯೆ ರಾಮ ಮಂದಿರಕ್ಕೆ ತೆರಳುವ ಭಕ್ತರಿಗೆ ಉಚಿತ ರೈಲು ಟಿಕೆಟ್ ಒದಗಿಸುವ ಯೋಜನೆ ಜಾರಿಗೆ ಒಪ್ಪಿಗೆ ನೀಡಿದೆ. ಬುಧವಾರ (ಜನವರಿ 10) ಮುಖ್ಯಮಂತ್ರಿ ವಿಷ್ಣುದೇವ ಸಾಯಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ʼʼ2023ರ ವಿಧಾನಸಭಾ ಚುನಾವಣೆ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡಿದ ವಾಗ್ದಾನದಂತೆ ಈ ಯೋಜನೆ ಜಾರಿಗೆ ಬರಲಿದೆʼʼ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಪ್ರತಿ ವರ್ಷ ಸುಮಾರು 20 ಸಾವಿರ ಭಕ್ತರನ್ನು ಅಯೋಧ್ಯೆಗೆ ರೈಲಿನ ಮೂಲಕ ಕರೆದೊಯ್ಯುವ ಯೋಜನೆ ಇದಾಗಿದೆ.
ಭರದ ಸಿದ್ಧತೆ
ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ಸುಮಾರು 7 ಸಾವಿರ ಮಂದಿ ಭಾಗವಹಿಸಲಿದ್ದು, ಈಗಾಗಲೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ. ‘ಪ್ರಾಣ ಪ್ರತಿಷ್ಠಾಪನೆ’ಯ ಪೂಜೆಯು ಜನವರಿ 16ರಿಂದ ಪ್ರಾರಂಭವಾಗಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ