Site icon Vistara News

Ram Mandir: ಬಿಜೆಪಿಯಿಂದ ಶ್ರೀರಾಮನ ಅಪಹರಣ; ಶಿವಸೇನೆ ನಾಯಕ ಹೀಗೆ ಹೇಳಿದ್ದೇಕೆ?

Sanjay Raut

BJP has kidnapped Lord Ram, says Sanjay Raut on invitation for consecration ceremony of Ram Mandir

ಮುಂಬೈ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದ (Ram Mandir) ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು 2024ರ ಜನವರಿ 22ರಂದು ಪ್ರತಿಷ್ಠಾಪನೆ ಮಾಡಲಾಗುತ್ತದೆ. ದೇಶದ ಎಲ್ಲ ಪ್ರಮುಖ ಪಕ್ಷಗಳು, ನಾಯಕರಿಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರ ಲೋಕಾರ್ಪಣೆ, ಪ್ರತಿಷ್ಠಾಪನೆ ನೆರವೇರಿಸುತ್ತಿರುವುದಕ್ಕೆ ಪ್ರತಿಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ, “ಬಿಜೆಪಿಯು ಭಗವಾನ್‌ ಶ್ರೀರಾಮನನ್ನು ಅಪಹರಿಸಿದೆ” ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ನಾಯಕ ಸಂಜಯ್‌ ರಾವತ್‌ (Sanjay Raut) ಹೇಳಿದ್ದಾರೆ.

“ರಾಮಮಂದಿರ ಆಡಳಿತ ಮಂಡಳಿಯ ಕಾರ್ಯಕ್ರಮವಾಗಿದ್ದರೆ ಬೇರೆಯ ರೀತಿ ಇರುತ್ತಿತ್ತು. ಆದರೆ, ಬಿಜೆಪಿಯು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಶ್ರೀರಾಮನನ್ನೇ ಬಿಜೆಪಿ ಅಪಹರಣ ಮಾಡಿದೆ. ಅಷ್ಟಕ್ಕೂ, ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರಿಗೆ ಉದ್ಘಾಟನೆಗೆ ಕಾರ್ಯಕ್ರಮದಲ್ಲ ಪಾಲ್ಗೊಳ್ಳುವಂತೆ ಆಹ್ವಾನಿಸಬೇಕಿಲ್ಲ. ಅಯೋಧ್ಯೆ ಜತೆ ಮೊದಲಿನಿಂದಲೂ ಶಿವಸೇನೆಗೆ ನಂಟಿದೆ. ಬಾಳಾ ಸಾಹೇಬ್‌ ಠಾಕ್ರೆ ಅವರು ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಡಿದ್ದಾರೆ. ಅಯೋಧ್ಯೆಯಲ್ಲಿ ಬಿಜೆಪಿಯ ರಾಜಕೀಯ ಮುಗಿದ ಮೇಲೆ ನಾವೆಲ್ಲ ಅಲ್ಲಿಗೆ ಹೋಗುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿಯೂ ಗೈರು; ಏನು ಕಾರಣ?

ಗೈರಾಗಲು ಸಿಪಿಎಂ ತೀರ್ಮಾನ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಸಿಪಿಎಂ, ಟಿಎಂಸಿ ಕೂಡ ತೀರ್ಮಾನಿಸಿವೆ. “ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಧರ್ಮವು ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆಯಾಗಿದೆ. ನಾವು ಎಲ್ಲರ ವೈಯಕ್ತಿಕ ಆಯ್ಕೆಯನ್ನು ಗೌರವಿಸುತ್ತದೆ. ಆದರೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿ ಬದಲಾಗಿದೆ. ಪ್ರಧಾನಿ, ಉತ್ತರ ಪ್ರದೇಶ ಮುಖ್ಯಮಂತ್ರಿಯಂತಹ ಸಾಂವಿಧಾನಿಕ ಸ್ಥಾನ ಹೊಂದಿದವರು ಉದ್ಘಾಟನೆ ಮಾಡುತ್ತಿದ್ದಾರೆ. ಧಾರ್ಮಿಕ ನಂಬಿಕೆಯನ್ನು ರಾಜಕೀಯಕ್ಕೆ ಎಳೆದು ತರಲಾಗಿದೆ. ಸಿಪಿಎಂ ಪಕ್ಷವು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದೆ” ಎಂದು ಸೀತಾರಾಮ್‌ ಯೆಚೂರಿ ಹೇಳಿದ್ದರು.

ಯಾವೆಲ್ಲ ಸೆಲೆಬ್ರಿಟಿಗಳಿಗೆ ಆಹ್ವಾನ?

ಸ್ಯಾಂಡಲ್‌ವುಡ್‌ನ ಯಶ್‌ ಹಾಗೂ ರಿಷಬ್‌ ಶೆಟ್ಟಿ ಅವರಿಗೆ ರಾಮಮಂದಿರ ಟ್ರಸ್ಟ್‌ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ. ಇನ್ನು ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಮಾಧುರಿ ದೀಕ್ಷಿತ್‌, ಅಕ್ಷಯ್‌ ಕುಮಾರ್‌, ಆಲಿಯಾ ಭಟ್‌, ಆಯುಷ್ಮಾನ್‌ ಕುರಾನ, ಅಜಯ್‌ ದೇವಗನ್‌, ಅನುಪಮ್‌ ಖೇರ್‌, ಸಂಜಯ್‌ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಮೋದಿಗೆ ರಾಮ ಪೂಜೆ ಮಾಡುವ ಹಕ್ಕಿದೆಯೇ ಎಂದ ಸುಬ್ರಮಣಿಯನ್ ಸ್ವಾಮಿಗೆ ಜಾಡಿಸಿದ ನೆಟ್ಟಿಗರು!

ದಕ್ಷಿಣ ಭಾರತದ ಚಿತ್ರರಂಗದ ಗಣ್ಯರಾದ ರಜನಿಕಾಂತ್‌, ಚಿರಂಜೀವಿ, ಮೋಹನ್‌ಲಾಲ್‌, ಧನುಶ್‌, ಪ್ರಭಾಸ್ ಅವರಿಗೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಸುಮಾರು 4 ಸಾವಿರ ಸಂತರು ಪಾಲ್ಗೊಳ್ಳಲಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ಸುಮಾರು 10-15 ಸಾವಿರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version