ನವದೆಹಲಿ: ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ (Lok Sabha Election 2024) ರಣಾಂಗಣ ಸಿದ್ಧವಾಗುತ್ತಿದೆ. ಬಿಜೆಪಿ, ಕಾಂಗ್ರೆಸ್ ಸೇರಿ ಸರ್ವ ಪಕ್ಷಗಳೂ ಚುನಾವಣೆಗೆ ರಣತಂತ್ರ ರೂಪಿಸುತ್ತಿವೆ. ಇಂಡಿಯಾ ಒಕ್ಕೂಟವಂತೂ (India Bloc) ದೆಹಲಿ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಮುಂದಾಗಿದೆ. ಬಿಜೆಪಿಯೂ ಹತ್ತಾರು ರಣತಂತ್ರಗಳ ಮೂಲಕ ಚುನಾವಣೆಗೆ ಸಿದ್ಧವಾಗುತ್ತಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ಕಣಕ್ಕಿಳಿದಿದ್ದಾರೆ. ಇದರ ಬೆನ್ನಲ್ಲೇ, ಬಿಜೆಪಿಯು 100 ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದ್ದು, ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಕೇಂದ್ರೀಯ ಚುನಾವಣೆ ಸಮಿತಿ ಸಭೆಯು ಫೆಬ್ರವರಿ 29ರಂದು ಸಭೆ ನಡೆಸಲಿದ್ದು, ಅದೇ ದಿನ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ. ಈಗಾಗಲೇ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಫೆಬ್ರವರಿ 29ರಂದು ಪ್ರಕಟ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರುಗಳು ಕೂಡ ಪಟ್ಟಿಯಲ್ಲಿ ಇರಲಿವೆ. ಆದರೆ, ಯಾವ ಕ್ಷೇತ್ರ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಲಾಗುತ್ತಿದೆ. ನರೇಂದ್ರ ಮೋದಿ ಅವರು ವಾರಾಣಸಿ, ಅಮಿತ್ ಶಾ ಅವರು ಗಾಂಧಿನಗರದಿಂದಲೇ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
100 ದಿನಗಳ ಟಾಸ್ಕ್ ಕೊಟ್ಟ ಮೋದಿ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮುಂದಿನ 100 ದಿನಗಳಲ್ಲಿ ಏನೇನು ಮಾಡಬೇಕು ಎಂಬುದರ ಕುರಿತು ಟಾಸ್ಕ್ ನೀಡಿದ್ದಾರೆ. ಅದರಲ್ಲೂ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತೆರಳಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಬೇಕು. ಈ ಬಾರಿ ಬಿಜೆಪಿಯು 370 ಹಾಗೂ ಎನ್ಡಿಎ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲಬೇಕು. ಅದಕ್ಕೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು ಎಂಬುದಾಗಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ಇದನ್ನೂ ಓದಿ: Narendra Modi: ಯುವಕರು ಕುಡುಕರು ಎಂದ ರಾಹುಲ್ ಗಾಂಧಿಗೆ ಮೋದಿ ತಿರುಗೇಟು!
ಮಾರ್ಚ್ 13ರ ಬಳಿಕವೇ ಚುನಾವಣೆ ದಿನಾಂಕ ಘೋಷಣೆ?
ಮಾರ್ಚ್ 13ರ ನಂತರವೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕೇಂದ್ರ ಚುನಾವಣಾ ಸಮಿತಿಯ ಅಧಿಕಾರಿಗಳು ಪ್ರಸ್ತುತ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ವಿವಿಧ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ಪ್ರಸ್ತುತ ಅವರು ತಮಿಳುನಾಡಿನಲ್ಲಿದ್ದು, ನಂತರ ಅವರು ಉತ್ತರ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ವಿವಿಧ ರಾಜ್ಯಗಳ ಭೇಟಿಯನ್ನು ಮಾರ್ಚ್ 13ರೊಳಗೇ ಮುಗಿಸಲು ಚುನಾವಣಾ ಆಯೋಗವು ನಿರ್ಧರಿಸಿದೆ. ಹೀಗಾಗಿ, ಆಯೋಗವು ಚುನಾವಣೆ ದಿನಾಂಕಗಳನ್ನು ಮಾರ್ಚ್ 13 ಅಥವಾ ಆ ನಂತರ ಪ್ರಕಟಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ