Site icon Vistara News

Building Collapses: ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಕನಿಷ್ಠ 5 ಮಂದಿ ಸಾವು

kolkatta

kolkatta

ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಕನಿಷ್ಠ 5 ಮಂದಿ ಮೃತಪಟ್ಟ ಘಟನೆ ಕೋಲ್ಕತ್ತಾದಲ್ಲಿ (Kolkata) ನಡೆದಿದೆ (Building Collapses). ನಗರದ ಗಾರ್ಡನ್‌ ರೀಚ್‌ (Garden Reach) ಪ್ರದೇಶದ ಹಜಾರಿ ಮೊಲ್ಲಾ ಬಗಾನ್‌ನಲ್ಲಿ ಈ ಅವಘಡ ಸಂಭವಿಸಿದೆ. ಹಲವರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದುವರೆಗೆ ಅವಶೇಷಗಳಡಿಯಲ್ಲಿ ಸಿಲುಕಿದ್ದ 20 ಮಂದಿಯನ್ನು ರಕ್ಷಿಸಲಾಗಿದೆ.

“ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಭಾನುವಾರ ತಡರಾತ್ರಿ ಕುಸಿದಿದೆ. ನಾವು ಕೆಲವು ಜನರನ್ನು ರಕ್ಷಿಸಿದ್ದೇವೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ʼʼಪೊಲೀಸ್‌ ಹಾಗೂ ಸ್ಥಳೀಯರ ನೆರವಿನಿಂದ ಸುಮಾರು 20 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಎನ್‌ಡಿಆರ್‌ಎಫ್‌ ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಟ್ಟಡ ಕುಸಿಯುವ ವೇಳೆ ಹತ್ತಿರದ ಗುಡಿಸಲುಗಳ ಮೇಲೆ ಬೃಹತ್ ಗಾತ್ರದ ಕಾಂಕ್ರೀಟ್ ತುಂಡುಗಳು ಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೋಲ್ಕತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಅವರು ಮುಂಜಾನೆ 1.40ರ ಸುಮಾರಿಗೆ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಬಿಲ್ಡಿಂಗ್‌ ಕುಸಿಯುವ ಚಿತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಹಜಾರಿ ಮೊಲ್ಲಾ ಬಗಾನ್‌ನಲ್ಲಿ 5 ಅಂತಸ್ತಿನ ಕಟ್ಟಡ (ಅಕ್ರಮವಾಗಿ ನಿರ್ಮಿಸಲಾಗಿದೆ) ಕುಸಿದಿದೆ. ಈ ನಿರ್ದಿಷ್ಟ ಪ್ರದೇಶವು ಕೋಲ್ಕತಾದ ಮೇಯರ್ ಮತ್ತು ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್ ಅವರ ಸುಪರ್ದಿಯಲ್ಲಿದೆ” ಎಂದು ಅಧಿಕಾರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಗಾಯಗೊಂಡವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ಧನವನ್ನು ಫಿರ್ಹಾದ್ ಹಕೀಮ್ ಘೋಷಿಸಿದ್ದಾರೆ. ʼʼಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಮೃತಪಟ್ಟವರ ಕುಟುಂಬದವರಿಗೆ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಿದ್ದೇವೆʼʼ ಎಂದು ಅವರು ತಿಳಿಸಿದ್ದಾರೆ.

ಆಘಾತ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ ಮಮತಾ ಬ್ಯಾನರ್ಜಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಹೇಳಿದ್ದಾರೆ. ʼʼಕೋಲ್ಕತಾ ಮುನ್ಸಿಪಲ್ ಕಾರ್ಪೊರೇಷನ್‌ನ ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕುಸಿತ ಬಗ್ಗೆ ತಿಳಿದು ದುಃಖವಾಗಿದೆ. ನಮ್ಮ ಮೇಯರ್, ಸಚಿವರು, ಕಾರ್ಯದರ್ಶಿಗಳು ಮತ್ತು ಪೊಲೀಸ್ ಆಯುಕ್ತರು, ನಾಗರಿಕ, ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ಮತ್ತು ತಂಡಗಳು ಸ್ಥಳದಲ್ಲೇ ಬೀಡು ಬಿಟ್ಟು ಅಗತ್ಯ ನೆರವು ನೀಡುತ್ತಿವೆ. ಮೃತರ ಹತ್ತಿರದ ಸಂಬಂಧಿಕರಿಗೆ ಮತ್ತು ಗಾಯಗೊಂಡವರಿಗೆ ಪರಿಹಾರವನ್ನು ನೀಡುತ್ತೇವೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Building Collapse: ನಿರ್ಮಾಣ ಹಂತದ ಶಾಲೆ ಕಟ್ಟಡ ಕುಸಿತ, 2 ಕಾರ್ಮಿಕರು ಸಾವು, 16 ಮಂದಿಗೆ ಗಂಭೀರ ಗಾಯ

ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮತಿ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ, ʼʼಅಪಘಾತದ ತನಿಖೆಗೆ ಆದೇಶ ನೀಡಲಾಗಿದೆ. ಈ ಕಟ್ಟಡ ನಿರ್ಮಾಣದಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದುʼʼ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version