ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಸ್ ಭೀಕರ ಅಪಘಾತಕ್ಕೀಡಾಗಿ (Road Accident) ಏಳು ಮಂದಿ ಮೃತಪಟ್ಟಿದ್ದಾರೆ ಮತ್ತು 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಲಖನೌ-ಗೋರಖ್ಪುರ ಹೆದ್ದಾರಿಯಲ್ಲಿ ಬಸ್ವೊಂದು ಟ್ರಕ್ಗೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಟ್ರಕ್ಗೆ ಡಿಕ್ಕಿಯಾಗುತ್ತಿದ್ದಂತೆ ಬಸ್ ಉರುಳಿಬಿದ್ದಿದೆ. ಹೀಗೆ ಕೆಳಗೆ ಬಿದ್ದ ಬಸ್ ಮೇಲೆ ಮತ್ತೆ ಟ್ರಕ್ ಹತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತ ನಡೆದ ಬಳಿಕ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು ತಕ್ಷಣವೇ ಅಲ್ಲಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅಯೋಧ್ಯಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಅವರು ‘7 ಜನ ಮೃತಪಟ್ಟಿದ್ದು ದೃಢಪಟ್ಟಿದೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ 12 ಪ್ರಯಾಣಿಕರ ಪರಿಸ್ಥಿತಿ ತುಸು ಗಂಭೀರವಾಗಿದೆ. ಅವರಲ್ಲಿ ಐದು ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಮತ್ತು 7 ಮಂದಿಗೆ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದೆ’ ಎಂದು ತಿಳಿಸಿದ್ದಾರೆ.
ಸಿಎಂ ಯೋಗಿ ಸಂತಾಪ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಸಾವಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದ್ದು ‘ಅಯೋಧ್ಯೆಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ’ ಎಂದು ಟ್ವೀಟ್ನಲ್ಲಿ ಹೇಳಲಾಗಿದೆ.