ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಅಬಕಾರಿ ನೀತಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎಂಬ ಆರೋಪದ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದ ಭಾಗವಾಗಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಕೇಜ್ರಿವಾಲ್ ಅವರು ಪ್ರಮುಖ ಆರೋಪಿಯಾಗಿದ್ದು, ಹಣಕಾಸು ಅವ್ಯವಹಾರದ ಕುರಿತು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಸಿಬಿಐ ತನಿಖೆ ಅಂತ್ಯವಾದಂತಾಗಿದೆ. ಚಾರ್ಜ್‌ಶೀಟ್ ಆಧಾರದ ಮೇಲೆ ಕೋರ್ಟ್ ಮುಂದಿನ ತೀರ್ಪು ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.
Central Bureau of Investigation (CBI) files chargesheet against Delhi Chief Minister Arvind Kejriwal and others in Rouse Avenue Court, Delhi in connection with Excise policy case.
— ANI (@ANI) July 29, 2024
(File photo) pic.twitter.com/XkfJgTnu2X
ಅರವಿಂದ್ ಕೇಜ್ರಿವಾಲ್ ಅವರನ್ನು ಆಗಸ್ಟ್ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ರೋಸ್ ಅವೆನ್ಯೂ ಕೋರ್ಟ್ ತಿಳಿಸಿದೆ. ಅಷ್ಟೇ ಅಲ್ಲ, ಜು.31ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ಹಾಜರುಪಡಿಸುವಂತೆ ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ.
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.
ಇದನ್ನೂ ಓದಿ: Arvind Kejriwal: ಪ್ಯಾಂಟ್ ಲೂಸ್ ಆಗಿದೆ, ಒಂದು ಬೆಲ್ಟ್ ಕೊಡಿ; ಕೋರ್ಟ್‌ಗೆ ಅರವಿಂದ್ ಕೇಜ್ರಿವಾಲ್ ಮನವಿ