Site icon Vistara News

CBI Raid | ಭ್ರಷ್ಟಾಚಾರ ಕೇಸ್, ಕೇಂದ್ರದ ಮಾಜಿ ಹಣಕಾಸು ಕಾರ್ಯದರ್ಶಿ ಅರವಿಂದ್‌ ನಿವಾಸಗಳ ಮೇಲೆ ಸಿಬಿಐ ದಾಳಿ

Arvind Mayaram CBI

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಕಾರ್ಯದರ್ಶಿ ಅರವಿಂದ್‌ ಮಾಯಾರಾಮ್‌ ಅವರ ನಿವಾಸಗಳ ಮೇಲೆ ಸಿಬಿಐ (CBI Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ ಹಾಗೂ ಜೈಪುರದಲ್ಲಿರುವ ಅರವಿಂದ್‌ ಮಾಯಾರಾಮ್‌ ಅವರ ನಿವಾಸಗಳಲ್ಲಿ ಸಿಬಿಐ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅರವಿಂದ್‌ ಅವರು ಕೇಂದ್ರದ ಹಣಕಾಸು ಕಾರ್ಯದರ್ಶಿಯಾಗಿದ್ದಾಗ ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪವಿದೆ. ನೋಟ್‌ ಪ್ರಿಂಟಿಂಗ್‌ ಟೆಂಡರ್‌ ನೀಡುವಾಗ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಆರ್‌ಬಿಐನ ಕೆಲ ಅಧಿಕಾರಿಗಳನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅರವಿಂದ್‌ ಮಾಯಾರಾಮ್‌ ಅವರು 2012ರಿಂದ 2014ರ ಅವಧಿಯಲ್ಲಿ ಕೇಂದ್ರದ ಹಣಕಾಸು ಕಾರ್ಯದರ್ಶಿಯಾಗಿದ್ದರು. ಬಳಿಕ ಇವರನ್ನು ಪಿ.ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ ಗ್ರಾಮೀಣ ಅಭಿವೃದ್ಧಿ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.

1978ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಅರವಿಂದ್‌ ಮಾಯಾರಾಮ್‌, ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಹಾಗೆಯೇ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರಿಗೆ ಮುಖ್ಯ ಆರ್ಥಿಕ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ | CBI raids | ಡಿ.ಕೆ. ಶಿವಕುಮಾರ್ ಮೇಲೆ ಸಿಬಿಐ ದಾಳಿ: ಇದು ದ್ವೇಷದ ರಾಜಕಾರಣವೆಂದು ಕಾಂಗ್ರೆಸ್ ಆಕ್ರೋಶ

Exit mobile version