ಚೆನ್ನೈ: ಲೋಕಸಭೆ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿ ಉಳಿದಿದೆ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಮತ್ತೊಂದೆಡೆ, ಎಲ್ಲ ಪಕ್ಷಗಳು ಒಗ್ಗೂಡಿ ಈ ಬಾರಿ ಬಿಜೆಪಿಯನ್ನು ಶತಾಯಗತಾಯ ಸೋಲಿಸಲೇಬೇಕು ಎಂಬ ರೀತಿಯಲ್ಲಿ ಯೋಜನೆ ರೂಪಿಸುತ್ತಿವೆ. ಇದರ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರ 70ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ, “ನಮಗೆ ಯಾರು ಪ್ರಧಾನಿಯಾಗುತ್ತಾರೆ ಎಂಬುದು ಮುಖ್ಯವಲ್ಲ. ಎಲ್ಲ ಪ್ರತಿಪಕ್ಷಗಳು ಒಗ್ಗೂಡಿ ಹೋರಾಡುವುದಷ್ಟೇ ಮುಖ್ಯವಾಗಿದೆ. ಹಾಗಾಗಿ, ಎಲ್ಲ ಸಮಾನ ಮನಸ್ಕ ಪ್ರತಿಪಕ್ಷಗಳು ಒಗ್ಗೂಡಿ, ಬಿಜೆಪಿಯನ್ನು ಸೋಲಿಸೋಣ” ಎಂದು ಹೇಳಿದರು.
“ಬಿಜೆಪಿಯು ಮತಗಳನ್ನು ಧ್ರುವೀಕರಣಗೊಳಿಸುತ್ತಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ. ಇಂತಹ ಧ್ರುವೀಕರಣ ಶಕ್ತಿಗಳ ವಿರುದ್ಧ ಎಲ್ಲರೂ ಹೋರಾಡಬೇಕಿದೆ. ಯಾರು ಪ್ರಧಾನಿಯಾಗುತ್ತಾರೆ ಎಂಬುದನ್ನು ನಾನು ಹೇಳಿಲ್ಲ. ಆದರೆ, ಪ್ರತಿಪಕ್ಷಗಳು ಒಗ್ಗೂಡಬೇಕು. ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗೆ ಎಲ್ಲ ಪಕ್ಷಗಳು ಶ್ರಮಿಸಬೇಕು” ಎಂದರು. ಈಗಾಗಲೇ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ದಿಸೆಯಲ್ಲಿ ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್, ಕೆ.ಚಂದ್ರಶೇಖರ್ ರಾವ್ ಸೇರಿ ಹಲವರು ವಿವಿಧ ರೀತಿಯಲ್ಲಿ ಪ್ರಯತ್ನ ಮಾಡಿದ್ದಾರೆ.