ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ (Ram Mandir) ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ (Congress) ತೀರ್ಮಾನಿಸಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಿದ್ದು, ಕಾರ್ಯಕ್ರಮಕ್ಕೆ ಬರಬೇಕು ಎಂದು ಆಮಂತ್ರಣ ನೀಡಿದರೂ ಕಾಂಗ್ರೆಸ್ ಪಕ್ಷವು ಉದ್ಘಾಟನೆ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದೆ. “ಇದು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕ್ರಮವಾಗಿರುವ ಕಾರಣ ತೆರಳುವುದಿಲ್ಲ” ಎಂದು ಪ್ರಕಟಣೆ ಹೊರಡಿಸಿದೆ.
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಅವರಿಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಲಾಗಿದೆ. ಭಗವಾನ್ ಶ್ರೀರಾಮನನ್ನು ಕೋಟ್ಯಂತರ ಜನ ಆರಾಧಿಸುತ್ತಾರೆ. ಅಷ್ಟಕ್ಕೂ ಧರ್ಮವು ವೈಯಕ್ತಿಕ ವಿಚಾರವಾಗಿದೆ. ಅಷ್ಟಕ್ಕೂ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕ್ರಮವನ್ನಾಗಿ ರೂಪಿಸಲಾಗಿದೆ. ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ಕಾರ್ಯಕ್ರಮವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಹಾಗಾಗಿ, ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನೆಗೆ ತೆರಳದಿರಲು ತೀರ್ಮಾನಿಸಿದ್ದಾರೆ” ಎಂದು ಪ್ರಕಟಣೆ ತಿಳಿಸಿದ್ದಾರೆ.
Here is the statement of Shri @Jairam_Ramesh, General Secretary (Communications), Indian National Congress. pic.twitter.com/JcKIEk3afy
— Congress (@INCIndia) January 10, 2024
ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಳಿಕ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತೆರಳುತ್ತಾರೆ ಎಂಬ ವರದಿಗಳು ಕೇಳಿಬಂದಿದ್ದವು. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರು ತೆರಳಲಿದ್ದಾರೆ ಎನ್ನಲಾಗಿತ್ತು. ಈಗ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯುವ ಕುರಿತು ಅಧಿಕೃತವಾಗಿ ಕಾಂಗ್ರೆಸ್ ಘೋಷಿಸಿದೆ. ಈಗಾಗಲೇ ಸಿಪಿಎಂ ಹಾಗೂ ತೃಣಮೂಲ ಕಾಂಗ್ರೆಸ್ ಕೂಡ ಕಾರ್ಯಕ್ರಮದಿಂದ ದೂರ ಉಳಿಯಲು ತೀರ್ಮಾನಿಸಿವೆ.
ರಾಮಮಂದಿರ ಲೋಕಾರ್ಪಣೆಯ ದಿನ ಉತ್ತರ ಪ್ರದೇಶ ಪೊಲೀಸರು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ ಸೇರಿ ಒಟ್ಟು 11 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಇದರ ಜತೆಗೆ ಹೆಚ್ಚಿನ ನಿಗಾ ಇರಿಸಲು, ಪ್ರತಿಯೊಂದು ಚಲನವಲನಗಳನ್ನು ಗಮನಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ರಾಮಮಂದಿರ ಉದ್ಘಾಟನೆ ದಿನ ಪ್ರಾಯೋಗಿಕವಾಗಿ ಇದನ್ನು ಬಳಸಿಕೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಇದೇ ತಂತ್ರಜ್ಞಾನ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Pranita Subhash: ರಾಮಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಪ್ರಣೀತಾ ಸುಭಾಷ್
ರಾಮಮಂದಿರ ಉದ್ಘಾಟನೆ ದಿನ ಗಣ್ಯರಿಗೂ ಸೇರಿ ಲಕ್ಷಾಂತರ ಜನರಿಗೆ ವಿಶೇಷ ರಾಮ ಹಲ್ವಾ ವಿತರಿಸಲಾಗುತ್ತದೆ. ವಿಷ್ಣು ಮನೋಹರ್ ಅವರು ರಾಮಮಂದಿರ ಉದ್ಘಾಟನೆಯ ದಿನ ಸುಮಾರು 7 ಸಾವಿರ ಕೆ.ಜಿ ರಾಮ ಹಲ್ವಾ ತಯಾರಿಸಲಿದ್ದಾರೆ. ಇದಕ್ಕಾಗಿ ಅವರು 12 ಸಾವಿರ ಲೀಟರ್ ನೀರಿನ ಸಾಮರ್ಥ್ಯದ ಬೃಹತ್ ಕಡಾಯಿಯೊಂದನ್ನು ಕೂಡ ತಯಾರಿಸಿದ್ದಾರೆ. “900 ಕೆಜಿ ರವೆ, 1 ಸಾವಿರ ಕೆಜಿ ತುಪ್ಪ, ಸಾವಿರ ಕೆಜಿ ಸಕ್ಕರೆ, 2 ಸಾವಿರ ಲೀಟರ್ ಹಾಲು, 2,500 ಲೀಟರ್ ನೀರು, 300 ಕೆಜಿ ಡ್ರೈ ಫ್ರೂಟ್ಸ್, 75 ಕೆಜಿ ಏಲಕ್ಕಿ ಪೌಡರ್ ಬಳಸಿಕೊಂಡು ವಿಶೇಷ ರಾಮ ಹಲ್ವಾ ತಯಾರಿಸಲಾಗುವುದು” ಎಂದು ವಿಷ್ಣು ಮನೋಹರ್ ತಿಳಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ