ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಕೊನೆಗೂ ಜಾಮೀನು ಸಿಕ್ಕಿದೆ. ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು, ಒಂದು ಲಕ್ಷ ರೂ. ಬಾಂಡ್ ಪಡೆದು, ಅವರಿಗೆ ಜಾಮೀನು ಮಂಜೂರು ಮಾಡಿದೆ.
ಇದರೊಂದಿಗೆ ಅರವಿಂದ್ ಕೇಜ್ರಿವಾಲ್ ಅವರ ಮೂರು ತಿಂಗಳ ಜೈಲುವಾಸವೂ ತಾತ್ಕಾಲಿಕವಾಗಿ ಅಂತ್ಯವಾದಂತಾಗಿದೆ. ಶುಕ್ರವಾರ ಬಾಂಡ್ ಬೇಲ್‌ಗೆ ಅರವಿಂದ್ ಕೇಜ್ರಿವಾಲ್ ಅರ್ಜಿ ಹಾಕಬಹುದಾಗಿದ್ದು, ಶುಕ್ರವಾರವೇ (ಜೂನ್ 21) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೇಲ್ ಬಾಂಡ್‌ಗಳನ್ನು ಸ್ವೀಕರಿಸಲು ಎರಡು ದಿನ ಟೈಮ್ ಬೇಕು ಎಂಬುದಾಗಿ ಇ.ಡಿ ಮನವಿ ಮಾಡಿತ್ತು. ಆದರೆ, ಇದಕ್ಕೆ ನ್ಯಾ. ನಿಯಾಯ್ ಬಿಂದು ಅವರು ನಕಾರ ವ್ಯಕ್ತಪಡಿಸಿದರು.
Delhi excise policy case | Rouse Avenue court allows the bail application of CM Arvind Kejriwal and grants bail to him on a bail bond of Rs 1 lakh
— ANI (@ANI) June 20, 2024
(File photo) pic.twitter.com/kAsqVTYVtu
ಏನಿದು ಪ್ರಕರಣ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ, ಕೇಜ್ರಿವಾಲ್ ಅವರು ಜೈಲಿಗೆ ಮರಳಿದ್ದರು. ಈಗ ಕೊನೆಗೂ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಇದನ್ನೂ ಓದಿ: Swati Maliwal: ಅರವಿಂದ್ ಕೇಜ್ರಿವಾಲ್ ನಿವಾಸದಲ್ಲೇ ಆಪ್ ಸಂಸದೆ ಸ್ವಾತಿ ಮೇಲೆ ಹಲ್ಲೆ!