ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ (Supreme Court) ಸಲ್ಲಿಸಿದ ಅರ್ಜಿಯನ್ನೇ ಹಿಂಪಡೆದಿದ್ದಾರೆ. ಇ.ಡಿ ಅಧಿಕಾರಿಗಳು ಬಂಧಿಸಿದ್ದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆಗೂ ಕೋರ್ಟ್ ಒಪ್ಪಿಗೆ ಸೂಚಿಸಿತ್ತು. ಆದರೆ, ದಿಢೀರನೆ ಅರ್ಜಿ ಹಿಂಪಡೆಯಲು ತೀರ್ಮಾನಿಸಿದ್ದಾರೆ.
“ಕೋರ್ಟ್ ವಿಚಾರಣೆ ಅವಧಿಗೂ, ಇ.ಡಿ ಅಧಿಕಾರಿಗಳ ವಿಚಾರಣೆಗೂ ಸಮಯ ಹೊಂದಿಕೆಯಾಗುತ್ತಿಲ್ಲ. ಅರವಿಂದ್ ಕೇಜ್ರಿವಾಲ್ ಅವರು ಮೊದಲು ಇ.ಡಿ ಅಧಿಕಾರಿಗಳ ವಿಚಾರಣೆ ಎದುರಿಸಲಿ. ಇದಾದ ಬಳಿಕ ನಾವು ಕೋರ್ಟ್‌ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ಈಗ ಅರವಿಂದ್ ಕೇಜ್ರಿವಾಲ್ ಪರವಾಗಿ ಸಲ್ಲಿಸಿದ ಅರ್ಜಿಯನ್ನು ಹಿಂಪಡೆಯುತ್ತಿದ್ದೇವೆ” ಎಂದು ದೆಹಲಿ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬೇಲಾ ಎಂ ತ್ರಿವೇದಿ ಹಾಗೂ ಎಂ.ಎಂ. ಸುಂದ್ರೇಶ್ ಅವರು ಕೇಜ್ರಿವಾಲ್ ಅರ್ಜಿಯನ್ನು ವಿಚಾರಣೆ ನಡೆಸಬೇಕಿತ್ತು.
Delhi CM Arvind Kejriwal withdraws from Supreme Court his plea against arrest by Enforcement Directorate.
— ANI (@ANI) March 22, 2024
Senior advocate Abhishek Manu Singhvi appearing for Arvind Kejriwal tells Supreme Court that Kejriwal is withdrawing the petition in the Supreme Court as it is clashing with… pic.twitter.com/ARcxfFPIO6
ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಚಿವೆ ಆತಿಶಿ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು, ಕೇಜ್ರಿವಾಲ್ ಬಂಧನವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ ಹಲವು ನಾಯಕರು ಖಂಡಿಸಿದ್ದಾರೆ.
ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್ ಪಡೆದಿದ್ದರು. ಆದರೆ, ದೆಹಲಿ ಹೈಕೋರ್ಟ್ ಇವರಿಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿತ್ತು.
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬಂಧನ ‘ಕರ್ಮದ ಫಲ’ ಎಂದ ಪ್ರಣಬ್ ಮುಖರ್ಜಿ ಪುತ್ರಿ; ಏನದು ಕರ್ಮ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ