ನವದೆಹಲಿ: ದಿಲ್ಲಿ ಅಬಕಾರಿ ನೀತಿ ಹಗರಣ (Delhi Excise Policy Case)ದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸದ್ಯಕ್ಕಿಲ್ಲ ರಿಲೀಫ್. ದೆಹಲಿ ಕೋರ್ಟ್ ಬುಧವಾರ ಅವರ ಬಂಧನವನ್ನು ಜುಲೈ 3ರವರೆಗೆ ವಿಸ್ತರಿಸಿದೆ.
ದಿಲ್ಲಿ ಅಬಕಾರಿ ನೀತಿ ಜಾರಿ ವೇಳೆ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ (Enforcement Directorate) ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಮೇ 10ರಂದು ಹೊರಗೆ ಬಂದ ಅವರು ಜಾಮೀನು ಅವಧಿ ಮುಗಿಯುವವರೆಗೆ ಪ್ರಚಾರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಅವಧಿ ಮುಗಿದ ಬಳಿಕ ಜೂನ್ 2ರಂದು ಮತ್ತೆ ಜೈಲಿಗೆ ತೆರಳಿದ್ದರು.
ಏನಿದು ಪ್ರಕರಣ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್ ಈ ಹಿಂದೆಯೇ ಆದೇಶಿಸಿತ್ತು.
ಇದನ್ನೂ ಓದಿ: Arvind Kejriwal: ಕೇಜ್ರಿವಾಲ್ ಬಂಧನ: ಮತ್ತೆ ಅಮೆರಿಕ ಕ್ಯಾತೆ; ಕಾಂಗ್ರೆಸ್ ಬ್ಯಾಂಕ್ ಅಕೌಂಟ್ ನಿರ್ಬಂಧ ಕುರಿತೂ ಕಿರಿಕ್
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಆರೋಪಗಳನ್ನು ಹೊರಿಸಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ಆಪ್ ಮುಖಂಡರು ಪದೇ ಪದೆ ಆರೋಪಿಸುತ್ತಲೇ ಬಂದಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ತನುಖಾ ಸಂಸ್ಥೆಗಳನ್ನು ದುರುಪಯೋಗಪಡಿಸುತ್ತಿದೆ ಎಂದು ದೂರಿದ್ದಾರೆ. ಇನ್ನು ಮಧ್ಯಂತರ ಜಾಮೀನು ಅವಧಿ ಮುಗಿಸಿ ಕೇಜ್ರಿವಾಲ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ʼʼಜಾಮೀನಿನ ಮೂಲಕ ಹೊರಗಡೆ ಬಂದ ನಾನು ಈ 21 ದಿನದಲ್ಲಿ ಒಂದು ನಿಮಿಷವನ್ನೂ ವ್ಯರ್ಥವಾಗಿ ಕಳೆದಿಲ್ಲ. ನಮ್ಮ ಎಲ್ಲ ಮಿತ್ರ ಪಕ್ಷಗಳಿಗಾಗಿ ಪ್ರಚಾರ ನಡೆಸದ್ದೇನೆ. ದೇಶವನ್ನು ಉಳಿಸಲು ಹೋರಾಟ ನಡೆಸಿದ್ದೇನೆ. ನನಗೆ ಆಮ್ ಆದ್ಮಿ ಪಾರ್ಟಿಗಿಂತ ದೇಶ ಮೊದಲುʼʼ ಎಂದು ಹೇಳಿದ್ದರು.