ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case:) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಈಗಾಗಲೇ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಬಂಧಿಲಾಗಿದ್ದು, ಮಾರ್ಚ್ 20ರ ವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ.
ಹೈದರಾಬಾದ್ ಮೂಲದ ಉದ್ಯಮಿ, ಕೆ.ಕವಿತಾ ಅವರ ಆಪ್ತ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ಸೋಮವಾರ ಇ.ಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ, ಕವಿತಾ ಅವರನ್ನೂ ಮಾರ್ಚ್ 9ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ನೀಡಿದೆ. ದೆಹಲಿಯಲ್ಲಿರುವ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಇ.ಡಿ ಸೂಚಿಸಿದೆ.
ಅಬಕಾರಿ ಹಗರಣದಲ್ಲಿ ಕೆ. ಕವಿತಾ ಹೆಸರು ಕೂಡ ಕೇಳಿಬಂದಿದ್ದು, ಸೌತ್ ಲಾಬಿಯಲ್ಲಿ ಇವರ ಪಾತ್ರವಿದೆ ಎನ್ನಲಾಗಿದೆ. ಈಗಾಗಲೇ ಇ.ಡಿ ಅಧಿಕಾರಿಗಳು ಕವಿತಾ ಅವರನ್ನು ವಿಚಾರಣೆ ನಡೆಸಿದ್ದಾರೆ. ಸಮನ್ಸ್ ನೀಡಿರುವ ಕುರಿತು ವಿಧಾನ ಪರಿಷತ್ ಸದಸ್ಯೆಯೂ ಆಗಿರುವ ಕವಿತಾ ಪ್ರತಿಕ್ರಿಯಿಸಿದ್ದು, “ತನಿಖಾ ಸಂಸ್ಥೆಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: Delhi Liquor policy case: ದಿಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಮಾರ್ಚ್ 20ರವರೆಗೆ ನ್ಯಾಯಾಂಗ ಬಂಧನ