ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣ(Delhi Excise policy)ದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್(Arvind Kejriwal) ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಸಿಕ್ಕಿರುವ ಬೆನ್ನಲ್ಲೇ, ದಿಲ್ಲಿ ರೋಸ್ ಅವೆನ್ಯೂ ಕೋರ್ಟ್ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ಇಂದು ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್, ಕೇಜ್ರಿವಾಲ್ ಅವರ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತ್ತು.
ಇದರ ಬೆನ್ನಲ್ಲೇ ರೋಸ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜು.25ರವರೆಗೆ ವಿಸ್ತರಿಸಿದೆ ಹೀಗಾಗಿ ಜಾಮೀನು ಸಿಕ್ಕರೂ ಕೇಜ್ರಿವಾಲ್ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಏನಿದು ಪ್ರಕರಣ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.
ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಎರಡು ವಾರಗಳ ಹಿಂದೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ಅವೆನ್ಯೂ ಕೋರ್ಟ್ ಆದೇಶ ನೀಡಿದೆ. ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.
ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆದೇಶವನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಕಾಯ್ದಿರಿಸಿದ್ದರು. ಕೇಜ್ರಿವಾಲ್ ತನಿಖೆಗೆ ಸಹಕಾರ ನೀಡುತ್ತಿಲ್ಲ, ಸರಿಯಾದ ಉತ್ತರಗಳನ್ನು ಕೊಡುತ್ತಿಲ್ಲ ಎಂದು ಸಿಬಿಐ ರಿಮಾಂಡ್ ಅರ್ಜಿಯಲ್ಲಿ ಆರೋಪಿಸಿದೆ.
ಇದನ್ನೂ ಓದಿ: Govt Employees: ಸರ್ಕಾರಿ ನೌಕರರ ವಿಮಾ ಪಾಲಿಸಿಗಳ ಮೊತ್ತಕ್ಕೆ ಬೋನಸ್ ನೀಡಲು ರಾಜ್ಯ ಸರ್ಕಾರ ಆದೇಶ!