Site icon Vistara News

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

Arvind Kejriwal

ED names Arvind Kejriwal, AAP as accused in Delhi excise policy case

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ (Delhi Excise Policy Case) ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal)‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯವು ರೋಸ್‌ ಅವೆನ್ಯೂ ಕೋರ್ಟ್‌ಗೆ ಪೂರಕ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಅಬಕಾರಿ ನೀತಿ ಕೇಸ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಆಮ್‌ ಆದ್ಮಿ ಪಕ್ಷವನ್ನು ಆರೋಪಿಗಳು ಎಂದು ಪ್ರಸ್ತಾಪಿಸಿದೆ.

ಅರವಿಂದ್‌ ಕೇಜ್ರಿವಾಲ್‌ ಹಾಗೂ ಆಪ್‌ಅನ್ನು ಆರೋಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪಿಸಿದ ಕಾರಣ ಮುಂದಿನ ದಿನಗಳಲ್ಲಿ ಕೇಜ್ರಿವಾಲ್‌ ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಚಾರ್ಜ್‌ಶೀಟ್‌ ಸಲ್ಲಿಸಿರುವ ಇ.ಡಿ, “ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದಾರೆ. ಲಾಭದ ಸ್ವಲ್ಪ ಮೊತ್ತವನ್ನು ಆಪ್‌ಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೆ ಬಳಸಲಾಗಿದೆ” ಎಂದು ಇ.ಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ‌ಮತ್ತೊಂದೆಡೆ, ಇ.ಡಿ ಬಂಧನ ಪ್ರಶ್ನಿಸಿ ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿದೆ.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Exit mobile version