ನವದೆಹಲಿ: ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡಬಹುದಾದ ಚುನಾವಣಾ ಬಾಂಡ್ ಯೋಜನೆಯು (Electoral Bonds) ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನ ನೀಡಿರುವ ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆಯಾಗುವುದರಿಂದ ಚುನಾವಣಾ ಬಾಂಡ್ ಯೋಜನೆಯು ಅಸಾಂವಿಧಾನಿಕವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪಂಚ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ತೀರ್ಪು ನೀಡಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆಯಾದಂತಾಗಿದೆ.
“ಚುನಾವಣಾ ಬಾಂಡ್ ಯೋಜನೆಯು ಸಂವಿಧಾನದ 19 (1) (A) ವಿಧಿ ಅಡಿಯಲ್ಲಿ ನೀಡಲಾದ ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಇದರಿಂದ ಕೊಡು-ಕೊಳ್ಳುವ ವ್ಯವಹಾರಕ್ಕೆ ( ಉದಾಹರಣೆ: ನೀನೊಂದು ಸಹಾಯ ಮಾಡಿದರೆ, ಅದಕ್ಕೆ ಬದಲಾಗಿ ಬೇರೆ ರೀತಿಯಲ್ಲಿ ನಾನು ಸಹಾಯ ಮಾಡುವುದು) ಪುಷ್ಟಿ ನೀಡುತ್ತದೆ. ಹಾಗೆಯೇ, ಕಂಪನಿಗಳ ಕಾಯ್ದೆಗೆ ತಿದ್ದುಪಡಿ ತಂದಿರುವುದು ಅಸಾಂವಿಧಾನಿಕವಾಗಿದೆ. ರಾಜಕೀಯ ಪಕ್ಷಗಳು ಪಡೆಯುವ ದೇಣಿಗೆಯ ಮೂಲ ತಿಳಿಯುವ ಹಕ್ಕು ದೇಶದ ನಾಗರಿಕರಿಗೆ ಇದೆ” ಎಂದು ನ್ಯಾಯಾಲಯ ತಿಳಿಸಿತು.
Supreme Court holds Electoral Bonds scheme is violative of Article 19(1)(a) and unconstitutional. Supreme Court strikes down Electoral Bonds scheme. Supreme Court says Electoral Bonds scheme has to be struck down as unconstitutional. https://t.co/T0X0RhXR1N pic.twitter.com/aMLKMM6p4M
— ANI (@ANI) February 15, 2024
ಚುನಾವಣಾ ಬಾಂಡ್ ಯೋಜನೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕಳೆದ ವರ್ಷದ ನವೆಂಬರ್ 2ರಂದು ತೀರ್ಪು ಕಾಯ್ದಿರಿಸಿತ್ತು. ಈಗ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದ್ದು, ಯೋಜನೆಯ ಸಾಂವಿಧಾನಿಕ ಮಾನ್ಯತೆಯನ್ನು ಅಲ್ಲಗಳೆದಿದೆ.
ಏನಿದು ಚುನಾವಣಾ ಬಾಂಡ್ ಯೋಜನೆ?
ಚುನಾವಣಾ ಬಾಂಡ್ ಯೋಜನೆಯನ್ನು 2017ರಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಅಧಿವೇಶನದಲ್ಲಿ ಮೊದಲು ಪ್ರಸ್ತಾಪಿಸಿದರು. ಹಣಕಾಸು ಕಾಯ್ದೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಗಳಿಗೆ ತಿದ್ದುಪಡಿ ತಂದು 2018ರ ಜನವರಿಯಲ್ಲಿ ಚುನಾವಣಾ ಬಾಂಡ್ ಯೋಜನೆ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಯಿತು. ಆ ಮೂಲಕ ಚುನಾವಣಾ ಬಾಂಡ್ ಯೋಜನೆ ಜಾರಿಗೊಳಿಸಲಾಯಿತು.
ಇದನ್ನೂ ಓದಿ: Electoral Bonds: ಚುನಾವಣಾ ಬಾಂಡ್ ಮೂಲ ತಿಳಿಯುವ ಹಕ್ಕು ಜನರಿಗಿಲ್ಲ ಎಂದ ಕೇಂದ್ರ ಸರ್ಕಾರ
ಚುನಾವಣಾ ಬಾಂಡ್ ಯೋಜನೆ ಅಡಿಯಲ್ಲಿ ಭಾರತದ ನಾಗರಿಕ ಅಥವಾ ಭಾರತದಲ್ಲಿ ನೋಂದಣಿಯಾದ ಕಂಪನಿಯು ಯಾವುದೇ ರಾಜಕೀಯ ಪಕ್ಷಕ್ಕೆ ಚುನಾವಣೆ ಬಾಂಡ್‌ಗಳನ್ನು ಖರೀದಿಸುವ ಮೂಲಕ ದೇಣಿಗೆ ನೀಡಬಹುದಾಗಿದೆ. ಭಾರತೀಯ ಸ್ಟೇಟ್ ಬ್ಯಾಂಕ್‌ನ (SBI) ಆಯ್ದ ಶಾಖೆಗಳಲ್ಲಿ 1 ಸಾವಿರ, 10 ಸಾವಿರ, ಲಕ್ಷ, 10 ಲಕ್ಷ ಹಾಗೂ 1 ಕೋಟಿ ರೂ.ವರೆಗೆ ಚುನಾವಣೆ ಬಾಂಡ್ ಖರೀದಿಸಿ ದೇಣಿಗೆ ನೀಡಬಹುದಾಗಿದೆ. ಇಲ್ಲಿ ದೇಣಿಗೆ ನೀಡಿದವರ ಕುರಿತು ಯಾವುದೇ ಮಾಹಿತಿ ಬಹಿರಂಗವಾಗುವುದಿಲ್ಲ. ಹಾಗೆಯೇ, ಇಷ್ಟು ಮೊತ್ತದ ದೇಣಿಗೆಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಹಾಗಾಗಿ, ಯೋಜನೆಯು ವಿವಾದಕ್ಕೆ ಗುರಿಯಾಗಿದ್ದು, ಇದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ