Site icon Vistara News

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Encounter In Bandipora

Encounter In Bandipora

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆ (Security forces)ಗಳೊಂದಿಗೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ. ಬಂಡಿಪೋರಾ ಜಿಲ್ಲೆಯ ಅರಗಾಮ್ (Aragam) ಗ್ರಾಮದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ಮುಂಜಾನೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿವೆ (Encounter In Bandipora).

“ಭಯೋತ್ಪಾದಕರು ಅವಿತು ಕುಳಿತಿದ್ದ ಅಡಗುತಾಣವನ್ನು ಭದ್ರತಾ ಪಡೆಗಳು ಸುತ್ತುವರಿದಾಗ ಗುಂಡಿನ ಚಕಮಕಿ ಆರಂಭವಾಯಿತು. ಎನ್‌ಕೌಂಟರ್‌ನಲ್ಲಿ ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ” ಎಂದು ಅಧಿಕಾರಿಗಳು ತಿಳಿಸಿದರು. ಹತ್ಯೆಗೀಡಾದ ಭಯೋತ್ಪಾದಕನನ್ನು ಗುರುತು ಕಂಡು ಹಿಡಿಯಲು ಯತ್ನಿಸಲಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದರು.

ಆರಂಭದಲ್ಲಿ ಗ್ರಮಾದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ಆಗಮಿಸಿ ಅವರನ್ನು ಸುತ್ತುವರಿದ ಬಳಿಕ ಸುಮ್ಮನಾಗಿದ್ದರು. ಬಳಿಕ ಕಾರ್ಯಾಚರಣೆ ಮುಂದುವರಿಯಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ತೊಡೆದು ಹಾಕಲಾಗುವುದು ಎಂದು ಭರವಸೆ ನೀಡಿದ್ದರು. ಅಲ್ಲದೆ ಅಮರನಾಥ ಯಾತ್ರೆಯ ವೇಳೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳಿಗೆ ಸಲಹೆ ನೀಡಿದ್ದರು. ಸದ್ಯ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ.

ಮತ್ತೆ ಉಗ್ರರ ಹಾವಳಿ

ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಅದಾದ ಬಳಿಕವೂ ಭಯೋತ್ಪಾದಕರು ದಾಳಿ ನಡೆಸಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ. ನಂತರ ಸೇಡು ತೀರಿಸಿಕೊಂಡ ಭಾರತೀಯ ಸೇನೆ ಈಗಾಗಲೇ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಅಡಗಿದ್ದ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಸಿಆರ್‌ಪಿಎಫ್‌ ಸಿಬ್ಬಂದಿಯೊಬ್ಬರು ಹತರಾಗಿದ್ದರು. ಬಳಿಕ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Kathua Terror Attack: ಯೋಧನ ಹತ್ಯೆಗೆ ಪ್ರತಿಕಾರ; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮುವಿನಿಂದ 60 ಕಿ.ಮೀ ದೂರದಲ್ಲಿರುವ, ಅಂತಾರಾಷ್ಟ್ರೀಯ ಗಡಿ ಬಳಿಯ ಗ್ರಾಮದಲ್ಲಿ ಜೂನ್‌ 11ರ ಸಂಜೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಓರ್ವ ನಾಗರಿಕ ಗಾಯಗೊಂಡಿದ್ದ. ನಂತರ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಒಬ್ಬ ಭಯೋತ್ಪಾದಕನನ್ನು ಕೊಂದಿದೆ. ಇನ್ನೊಬ್ಬನನ್ನು ಜೂನ್‌ 12ರ ಮುಂಜಾನೆ ಗುಂಡಿಕ್ಕಿ ಕೊಲ್ಲಲಾಯಿತು. ಈ ಮಧ್ಯೆ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

Exit mobile version