Site icon Vistara News

Encounter In Bijapur: ಭದ್ರತಾ ಪಡೆಗಳೊಂದಿಗೆ ಎನ್‌ಕೌಂಟರ್‌; 6 ನಕ್ಸಲರ ಸಾವು

Encounter In Bijapur

Encounter In Bijapur

ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ (Encounter In Bijapur)ನಲ್ಲಿ 6 ಮಂದಿ ನಕ್ಸಲರು (Naxalites) ಸಾವನ್ನಪ್ಪಿದ್ದಾರೆ. ಈ ಪೈಕಿ ಇಬ್ಬರು ಮಹಿಳಾ ಕೇಡರ್‌ಗಳೂ ಸೇರಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.

ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮಗಳ ತಲ್ಪೆರು ನದಿಗೆ ಅಡ್ಡಲಾಗಿ ಇರುವ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ. ಮಾಹಿತಿ ನೀಡಿದ್ದಾರೆ.

ಮಾವೋವಾದಿಗಳ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಪ್ಲಾಟೂನ್ ಸಂಖ್ಯೆ 10ರಲ್ಲಿ ನಕ್ಸಲರು ಇರುವ ಬಗ್ಗೆ ಲಭಿಸಿದ ಮಾಹಿತಿಯ ಆಧಾರದ ಮೇಲೆ ಜಿಲ್ಲಾ ರಿಸರ್ವ್ ಗಾರ್ಡ್ (DRG), ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಅದರ ಘಟಕವಾದ ಕೋಬ್ರಾ (Commando Battalion for Resolute Action)ಗೆ ಸೇರಿದ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು.

ʼʼಇಬ್ಬರು ಮಹಿಳೆಯರು ಸೇರಿದಂತೆ ಆರು ನಕ್ಸಲರ ಶವಗಳು ಮತ್ತು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆʼʼ ಎಂದು ಸುಂದರರಾಜ್ ತಿಳಿಸಿದ್ದಾರೆ. ಮೃತ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಇನ್ನೂ ಅನೇಕ ನಕ್ಸಲರು ಗಾಯಗೊಂಡಿದ್ದಾರೆ ಮತ್ತು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿದ್ದು, ಏಪ್ರಿಲ್ 19ರಂದು ಇಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕಂಕೇರ್‌ನಲ್ಲಿ ಎನ್‌ಕೌಂಟರ್‌

ಮಾರ್ಚ್‌ 16ರಂದು ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ನಕ್ಸಲ್‌ ಸಾವನ್ನಪ್ಪಿದ್ದ. ಕೊಯಲಿಬೇಡಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿಲ್ಪಾರಸ್ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡವು ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿತ್ತು.

ಜಿಲ್ಲಾ ರಿಸರ್ವ್ ಗಾರ್ಡ್ (District Reserve Guard) ಮತ್ತು ಗಡಿ ಭದ್ರತಾ ಪಡೆ (Border Security Force) ಜಂಟಿಯಾಗಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಈ ವೇಳೆ ಗುಂಡಿನ ಚಕಮಕಿ ನಡೆದಿತ್ತು. ಸಾವನ್ನಪ್ಪಿದ ನಕ್ಸಲ್‌ನ ಶವ, ಶಸ್ತ್ರಾಸ್ತ್ರ ಮತ್ತು ಸ್ಫೋಟಕ ವಸ್ತುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Encounter In Kanker: ಛತ್ತೀಸ್‌ಗಢದಲ್ಲಿ ಮಾವೋವಾದಿಗಳೊಂದಿಗೆ ಎನ್‌ಕೌಂಟರ್‌; ಕಾನ್ಸ್‌ಟೇಬಲ್‌ ಹುತಾತ್ಮ

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಮತ್ತು ಮಾವೋವಾದಿ ಸಾವನ್ನಪ್ಪಿದ್ದರು. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಿಡೂರ್ ಗ್ರಾಮದ ಬಳಿಯ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಅದಾಗಿ ಕೆಲವೇ ದಿನಗಳ ಅಂತರದಲ್ಲಿ ಈ ಎನ್‌ಕೌಂಟರ್‌ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version