ನವದೆಹಲಿ: ಕನಿಷ್ಠ ಬೆಂಬಲ ಬೆಲೆಯ ಕಾನೂನು ಜಾರಿ (MSP Law) ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ಬುಧವಾರದಿಂದ (ಫೆಬ್ರವರಿ 21) ಸಾವಿರಾರು ರೈತರು ಪ್ರತಿಭಟನೆ ಆರಂಭಿಸಲಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ ಆರಂಭವಾಗಲಿದ್ದು, ದೆಹಲಿ, ಪಂಜಾಬ್ ಹಾಗೂ ಹರಿಯಾಣ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೆಳೆಗಳಿಗೆ ಐದು ವರ್ಷದವರೆಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ನೀಡಲು ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮತ್ತೆ ಪ್ರತಿಭಟನೆ ಶುರು ಮಾಡಲಿದ್ದಾರೆ.
ದೆಹಲಿ ಗಡಿಯಲ್ಲಿ ಸುಮಾರು 12 ಸಾವಿರ ಟ್ರ್ಯಾಕ್ಟರ್‌ಗಳು ನಿಂತಿವೆ. ಸುಮಾರು 14 ಸಾವಿರ ರೈತರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಇನ್ನೂ ಸಾವಿರಾರು ರೈತರು ಜಮೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. 300 ಕಾರುಗಳು, 2 ಮಿನಿ ಬಸ್‌ಗಳು, ಜೆಸಿಬಿ ಸೇರಿ ಹಲವು ವಾಹನಗಳನ್ನು ತೆಗೆದುಕೊಂಡು ಬಂದಿರುವ ರೈತರು ಪ್ರತಿಭಟನೆಗೆ ಸಕಲ ರೀತಿಯ ಸಿದ್ಧತೆ ಕೈಗೊಂಡಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅಂಬಾಲ ಸೇರಿ ಹಲವು ಗಡಿಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದೆ. ಯಾವುದೇ ರೀತಿಯ ಹಿಂಸಾಚಾರಕ್ಕೆ ಆಸ್ಪದ ನೀಡದಿರಲು ಕ್ರಮ ತೆಗೆದುಕೊಂಡಿದ್ದಾರೆ.
Protesters brought proclain machine to use in farmers' protest pic.twitter.com/xOFUnNdR3B
— Anshul Saxena (@AskAnshul) February 20, 2024
ಇದನ್ನೂ ಓದಿ: Farmers Protest: 5 ವರ್ಷ ಎಂಎಸ್‌ಪಿ ಆಫರ್‌ಗೆ ರೈತರ ತಿರಸ್ಕಾರ!
ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಹಾಗೂ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರೈ ಅವರ ನೇತೃತ್ವದಲ್ಲಿ ಕಳೆದ ಭಾನುವಾರ (ಫೆಬ್ರವರಿ 18) ಚಂಡೀಗಢದಲ್ಲಿ ರೈತ ಮುಖಂಡರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿತ್ತು. ಎಂಎಸ್‌ಪಿ ಕಾನೂನು ಸೇರಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ರೈತರು ಆಗ್ರಹಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಂಎಸ್‌ಪಿ ಕುರಿತು ಹೊಸ ಯೋಜನೆ ರೂಪಿಸಿದೆ. ಆದರೆ, ಈ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ.
ಕೇಂದ್ರ ಸರ್ಕಾರದ ಆಫರ್ ಏನು?
ದ್ವಿದಳ ಧಾನ್ಯಗಳು, ಜೋಳ, ಹತ್ತಿ ಸೇರಿ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವ ಕುರಿತು ಹೊಸ ಸಮಿತಿ ರಚಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಹಾಗೆಯೇ, ರೈತರಿಂದ ಕೃಷಿ ಉತ್ಪನ್ನಗಳ ಖರೀದಿಗೆ ಯಾವುದೇ ಮಿತಿ ಇರುವುದಿಲ್ಲ ಹಾಗೂ ಖರೀದಿಗಾಗಿ ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗುತ್ತದೆ ಎಂಬುದು ಸೇರಿ ಕೇಂದ್ರ ಸರ್ಕಾರವು ರೈತರಿಗೆ ಹಲವು ಆಫರ್ ನೀಡಿದೆ. ಮುಂದಿನ ಐದು ವರ್ಷಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತ್ರಿಯೂ ಕೇಂದ್ರದ ಆಫರ್‌ಗಳಲ್ಲಿ ಸೇರಿದೆ. ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ರೈತರು ಪ್ರತಿಭಟನೆ ನಡೆಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು, ಬೇಡಿಕೆಗಳನ್ನು ಈಡೇರಿಸುವ ಮೂಲಕ ಅನ್ನದಾತರ ಪ್ರತಿಭಟನೆ ಶಮನಗೊಳಿಸಲು ಪ್ರಯತ್ನಿಸಿತ್ತು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ