ನವದೆಹಲಿ: ಟಾಟಾ ಸನ್ಸ್ ಮಾಜಿ ಚೇರ್ಮನ್ ಸೈರಸ್ ಮಿಸ್ತ್ರಿ ಅವರು ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ (Seat Belt) ಧರಿಸಿರಲಿಲ್ಲ ಹಾಗೂ ಅವರ ಸಾವಿಗೆ ಇದೇ ಪ್ರಮುಖ ಕಾರಣ ಎಂದು ತಿಳಿದುಬಂದ ಬೆನ್ನಲ್ಲೇ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. “ಕಾರಿನ ಹಿಂಬದಿ ಕುಳಿತವರೂ ಇನ್ನು ಸೀಟ್ ಬೆಲ್ಟ್ ಧರಿಸಬೇಕು. ಇಲ್ಲದಿದ್ದರೆ ದಂಡ ವಿಧಿಸುವ ವ್ಯವಸ್ಥೆ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ” ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.
“ಕಾರಿನ ಹಿಂಬದಿಯಲ್ಲಿ ಕುಳಿತವರೂ ಸೀಟ್ ಬೆಲ್ಟ್ ಧರಿಸಬೇಕು ಎಂಬ ನಿಯಮ ಈಗಾಗಲೇ ಇದೆ. ಆದರೆ, ನಿಯಮವನ್ನು ಯಾರೂ ಪಾಲಿಸುತ್ತಿಲ್ಲ. ಸರ್ಕಾರಕ್ಕೆ ಜನರ ಜೀವವೇ ಮುಖ್ಯವಾಗಿರುವುದರಿಂದ ಶೀಘ್ರದಲ್ಲಿಯೇ ಹಿಂಬದಿ ಕುಳಿತವರಿಗೂ ಸೀಟ್ ಬೆಲ್ಟ್ ಧರಿಸದಿದ್ದರೆ ದಂಡ ವಿಧಿಸಲಾಗುತ್ತದೆ” ಎಂದು ಗಡ್ಕರಿ ತಿಳಿಸಿದ್ದಾರೆ.
“ದಂಡ ಪಡೆಯುವುದಕ್ಕಿಂತ ಜನರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಉದ್ದೇಶವಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಕಾರಿನ ಹಿಂಬದಿ ಸೀಟುಗಳಲ್ಲಿ ಕುಳಿತವರು ಸೀಟ್ ಬೆಲ್ಟ್ ಧರಿಸದಿದ್ದರೆ ಒಂದು ಸಾವಿರ ರೂ. ದಂಡ ವಿಧಿಸಲಾಗುತ್ತದೆ. 2024ರ ವೇಳೆಗೆ ರಸ್ತೆ ಅಪಘಾತಗಳಲ್ಲಿ ಮೃತಪಡುವವರ ಪ್ರಮಾಣವನ್ನು ಶೇ.50ರಷ್ಟು ಇಳಿಸುವುದು ಸರ್ಕಾರದ ಗುರಿಯಾಗಿದೆ. ಅದರಲ್ಲೂ, ಎಲ್ಲೆಡೆ ಸಿಸಿಟಿವಿ ಅಳವಡಿಸಿರುವ ಕಾರಣ ನಿಯಮ ಉಲ್ಲಂಘಿಸುವವರು ಸುಲಭವಾಗಿ ಸಿಕ್ಕಿಬೀಳುತ್ತಾರೆ” ಎಂದು ಮಾಹಿತಿ ನೀಡಿದರು.
ಟಾಟಾ ಸನ್ಸ್ ಮಾಜಿ ಚೇರ್ಮನ್ ಸೈರಸ್ ಮಿಸ್ತ್ರಿ ಅವರು ಕಳೆದ ಭಾನುವಾರ ಮುಂಬೈ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಅವರು ಸೀಟ್ ಬೆಲ್ಟ್ ಧರಿಸಿರಲಿಲ್ಲ. ಹಾಗಾಗಿ, ಅಪಘಾತದ ತೀವ್ರತೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | Cyrus Mistry Death | ಸೈರಸ್ ಮಿಸ್ತ್ರಿ ಸೀಟ್ ಬೆಲ್ಟ್ ಧರಿಸಿರಲಿಲ್ಲ, ಕೇವಲ 9 ನಿಮಿಷದಲ್ಲಿ 20 ಕಿ.ಮೀ ತಲುಪಿದ್ದ ಕಾರು