ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ (Flash Flood) ಉಂಟಾಗಿದ್ದು, ಭೂಕುಸಿತ ಸೇರಿ ಹಲವು ಅವಘಡಗಳಿಂದಾಗಿ ೧6 ಜನ ಮೃತಪಟ್ಟಿದ್ದಾರೆ. ಇನ್ನೂ ಏಳು ಜನ ನಾಪತ್ತೆಯಾಗಿದ್ದು, ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಹಮಿಪುರ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸಂಬಂಧಿತ ಅವಘಡಗಳು ಸಂಭವಿಸಿವೆ. ಪ್ರವಾಹಕ್ಕೆ ಕೊಚ್ಚಿಹೋಗಿ, ಭೂಕುಸಿತ ಉಂಟಾಗಿ ಜನ ಮೃತಪಟ್ಟಿದ್ದಾರೆ. ಆದಾಗ್ಯೂ, ಪ್ರವಾಹಪೀಡಿತ ಜಿಲ್ಲೆಯಿಂದ ೨೨ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.
ಉತ್ತರಾಖಂಡದಲ್ಲಿ ಮೇಘಸ್ಫೋಟ
ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಉಂಟಾಗಿದ್ದು, ಪ್ರವಾಹದಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ತಪಕೇಶ್ವರ ಗುಹೆಯಲ್ಲಿರುವ ಶಿವ ದೇವಾಲಯಕ್ಕೂ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ನೂರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ.