ನವ ದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಆದರೆ ಶ್ವಾಸನಾಳದಲ್ಲಿ ಕಾಣಿಸಿಕೊಂಡಿರುವ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ನಿಗಾದಲ್ಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ಕೋವಿಡ್ ನಂತರದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸೋನಿಯಾ ಅವರನ್ನು ಜೂನ್ 12ರಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಗಿನಿಂದ ರಕ್ತಸ್ರಾವವಾಗುತ್ತಿದ್ದ ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಗಿತ್ತು. ಇದೇ ಸಂದರ್ಭದಲ್ಲಿ ಶ್ವಾಸನಾಳದಲ್ಲಿ ಫಂಗಸ್ ಸೋಂಕಿರುವುದು ಪತ್ತೆಯಾಗಿತ್ತು. ಅವರಿಗೆ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿಳಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಅವರಿಗೆ ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಇದಕ್ಕೂ ಮೊದಲು ಜೂನ್ ೮ಕ್ಕೆ ಹಾಜರಾಗುವಂತೆ ಇಡಿ ಸೂಚಿಸಿತ್ತು. ಆದರೆ ಕೋವಿಡ್ ಸೋಂಕಿನಿಂದಾಗಿ ಅದನ್ನು ಮುಂದೂಡಲಾಗಿತ್ತು.
ಈ ನಡುವೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ಅವರನ್ನು ಸತತ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಇದನ್ನೂ ಓದಿ: ಕೊರೊನಾದಿಂದ ಆರೋಗ್ಯದಲ್ಲಿ ಏರುಪೇರು; ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು