ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯ ಬಳಿಯ ಜ್ಞಾನವಾಪಿ (Gyanvapi Case) ಮಸೀದಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಐಎಸ್‌ಐ) ಅಧಿಕಾರಿಗಳು ವೈಜ್ಞಾನಿಕ ಸಮೀಕ್ಷೆ ಆರಂಭಿಸಿದ್ದಾರೆ. ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಸಮೀಕ್ಷೆ ಆರಂಭಿಸಲಾಗಿದ್ದು, ಮಸೀದಿಗೆ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುಪ್ರೀಂ ಮೊರೆಹೋದ ಸಮಿತಿ, ಇಂದೇ ವಿಚಾರಣೆ
ಇನ್ನು, ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ ಮೊರೆಹೋಗಿದ್ದು, ಶುಕ್ರವಾರವೇ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ, ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಬಿಜೆಪಿ ನಾಯಕರು ಸೇರಿ ಹಲವರು ಸ್ವಾಗತಿಸಿದ್ದಾರೆ. ಸತ್ಯ ಹೊರಬರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಸೀದಿಗೆ ಆಗಮಿಸಿದ ಅಧಿಕಾರಿಗಳು
ಜುಲೈ 21ರಂದು ವಾರಾಣಸಿ ನ್ಯಾಯಾಲಯವು ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಅದರಂತೆ ಮಸೀದಿಯಲ್ಲಿ ಐಎಸ್‌ಐ ಜುಲೈ 24ರಂದು ಸಮೀಕ್ಷೆ ಆರಂಭಿಸಿತ್ತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್ ಸಮೀಕ್ಷೆಗೆ ತಡೆಯಾಜ್ಞೆ ನೀಡಿದ್ದಲ್ಲದೆ, ಮುಸ್ಲಿಂ ಅರ್ಜಿದಾರರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿತ್ತು. ಅದರಂತೆ, ಅಂಜುಮಾನ್ ಇಂತೇಜಾಮಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಸಮೀಕ್ಷೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿತ್ತು. ಈಗ ಅಲಹಾಬಾದ್ ಹೈಕೋರ್ಟ್ ಸಮೀಕ್ಷೆಗೆ ಅನುಮತಿ ನೀಡಿದೆ.
ಇದನ್ನೂ ಓದಿ: Gyanvapi Case: ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅಸ್ತು; ಮುಸ್ಲಿಮರ ಅರ್ಜಿ ವಜಾ
ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿ ಹಿಂದು ಮಹಿಳೆಯರು 2021ರಲ್ಲಿ ವಾರಾಣಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಬಳಿಕ ನ್ಯಾಯಾಲಯವು ಮಸೀದಿಯಲ್ಲಿ ವಿಡಿಯೊ ಸಮೀಕ್ಷೆಗೆ ಅನುಮತಿ ನೀಡಿತ್ತು. ಈಗಾಗಲೇ, ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆ ಮುಗಿದಿದ್ದು, ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗ ಪತ್ತೆಯಾದ ಕಾರಣ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಲಾಗಿದೆ.