ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಅಂಟಿಕೊಂಡಂತಿರುವ ಜ್ಞಾನವಾಪಿ (Gyanvapi Case) ಮಸೀದಿಯ ವೈಜ್ಞಾನಿಕ ಸಮೀಕ್ಷೆಯು ಶ್ರಾವಣ ಮಾಸದ ಮೊದಲ ಸೋಮವಾರದಂದೇ ಆರಂಭವಾಗಿದೆ. ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ISI) ಸುಮಾರು 40 ಅಧಿಕಾರಿಗಳ ತಂಡವು ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ.
ಜ್ಞಾನವಾಪಿ ಮಸೀದಿಯಲ್ಲಿರುವ ಶೃಂಗಾರ ಗೌರಿಯ ಪೂಜೆಗೆ ಅವಕಾಶ ನೀಡಬೇಕು ಎಂದು ನಾಲ್ವರು ಹಿಂದು ಮಹಿಳೆಯರು ಅರ್ಜಿ ಸಲ್ಲಿಸಿದ ಬಳಿಕ ವಿಡಿಯೊ ಸಮೀಕ್ಷೆಗೆ ಅನುಮತಿ ನೀಡಲಾಗಿತ್ತು. ಸಮೀಕ್ಷೆ ವೇಳೆ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿತ್ತು. ಇದಾದ ಬಳಿಕ ಮಹಿಳೆಯರು ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಐಎಸ್‌ಐಗೆ ಸೂಚಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಅದಕ್ಕೆ, ವಾರಾಣಸಿ ನ್ಯಾಯಾಲಯವು ಅನುಮತಿ ನೀಡಿದೆ.
ಪೊಲೀಸ್ ಬಂದೋಬಸ್ತ್
#WATCH | Varanasi, UP: Police team enters Gyanvapi mosque complex, ASI survey begins pic.twitter.com/kAY9CwN0Eq
— ANI UP/Uttarakhand (@ANINewsUP) July 24, 2023
ಹಾಗಾಗಿ, ಐಎಸ್‌ಐ ಅಧಿಕಾರಿಗಳು ಬಿಗಿ ಭದ್ರತೆಯ ಮಧ್ಯೆಯೇ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದ್ದಾರೆ. ಮಸೀದಿ ಹೊರಗೆ ಭದ್ರತಾ ಸಿಬ್ಬಂದಿ, ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಮಾಡಿರುವ ವಿಡಿಯೊಗಳು ಲಭ್ಯವಾಗಿವೆ. ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ಕುರಿತು ಆಗಸ್ಟ್ 4ರೊಳಗೆ ಅಧ್ಯಯನ ವರದಿ ನೀಡಬೇಕು ಎಂದು ಕೂಡ ಐಎಸ್‌ಐಗೆ ವಾರಾಣಸಿ ನ್ಯಾಯಾಲಯವು ನಿರ್ದೇಶನ ನೀಡಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ
ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ವಾರಾಣಸಿ ನ್ಯಾಯಾಲಯ ಹೊರಡಿಸಿದ ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸೋಮವಾರವೇ (July 24) ವಿಚಾರಣೆ ನಡೆಯಲಿದೆ. ಹಾಗಾಗಿ, ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಯಾವ ತೀರ್ಪು ನೀಡುತ್ತದೆ ಎಂಬ ಕುತೂಹಲ ಹಿಂದುಗಳು ಹಾಗೂ ಮುಸ್ಲಿಮರಲ್ಲಿ ಮೂಡಿದೆ.
ಇದನ್ನೂ ಓದಿ: Gyanvapi Case: ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಅಸ್ತು; ಹಿಂದುಗಳಿಗೆ ಭಾರಿ ಮುನ್ನಡೆ
ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿ ಹಿಂದು ಮಹಿಳೆಯರು 2021ರಲ್ಲಿ ವಾರಾಣಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಬಳಿಕ ನ್ಯಾಯಾಲಯವು ಮಸೀದಿಯಲ್ಲಿ ವಿಡಿಯೊ ಸಮೀಕ್ಷೆಗೆ ಅನುಮತಿ ನೀಡಿತ್ತು. ಈಗಾಗಲೇ, ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆ ಮುಗಿದಿದ್ದು, ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗ ಪತ್ತೆಯಾದ ಕಾರಣ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಲಾಗಿತ್ತು.