ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯದ ಬಳಿ ಇರುವ ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ (Gyanvapi Survey) ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಶನಿವಾರವೂ (ಆಗಸ್ಟ್ 5) ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ISI) ಅಧಿಕಾರಿಗಳು ಸಮೀಕ್ಷೆ ಆರಂಭಿಸಿದ್ದಾರೆ. ದೇವಾಲಯ ಇತ್ತು ಎಂಬುದರ ಕುರುಹುಗಳಾಗಿ ತ್ರಿಶೂಲ, ಸ್ವಸ್ತಿಕ್, ಗಂಟೆ, ಕಮಲದ ಆಕೃತಿ ಸೇರಿ ಹಲವು ವಸ್ತುಗಳು ಪತ್ತೆಯಾಗಿದ್ದು, ಇವುಗಳ ವಿಡಿಯೊ ರೆಕಾರ್ಡ್ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಶನಿವಾರ ಬೆಳಗ್ಗೆ 9 ಗಂಟೆಗೆ ಸಮೀಕ್ಷೆ ಆರಂಭವಾಗಿದ್ದು, ಮಧ್ಯಾಹ್ನ 12.30ರವರೆಗೆ ನಡೆಯಲಿದೆ. ಹಾಗೆಯೇ, ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆವರೆಗೆ ಸಮೀಕ್ಷೆ ಕೈಗೊಳ್ಳಲಾಗುತ್ತದೆ. ಮಸೀದಿ ಸಮಿತಿ ಸದಸ್ಯರ ಸಮ್ಮುಖದಲ್ಲಿಯೇ ಸಮೀಕ್ಷೆ ನಡೆಯುತ್ತಿದ್ದು, ಇದಕ್ಕಾಗಿ ತಜ್ಞರು, ತಂತ್ರಜ್ಞರು ಸೇರಿ 41 ಜನರ ತಂಡ ರಚಿಸಲಾಗಿದೆ. ಮಸೀದಿಯ ಯಾವುದೇ ಭಾಗಕ್ಕೆ ಹಾನಿಯಾಗದಂತೆ ಸಮೀಕ್ಷೆ ಕೈಗೊಳ್ಳಲು ಕೋರ್ಟ್ ಸೂಚಸಿದೆ. ಇನ್ನು, ಮಸೀದಿಯ ಪ್ರತಿಯೊಂದು ಭಾಗವನ್ನೂ ವಿಡಿಯೊ ರೆಕಾರ್ಡ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಜುಲೈ 21ರಂದು ವಾರಾಣಸಿ ನ್ಯಾಯಾಲಯವು ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಅದರಂತೆ ಮಸೀದಿಯಲ್ಲಿ ಐಎಸ್‌ಐ ಜುಲೈ 24ರಂದು ಸಮೀಕ್ಷೆ ಆರಂಭಿಸಿತ್ತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್ ಸಮೀಕ್ಷೆಗೆ ತಡೆಯಾಜ್ಞೆ ನೀಡಿದ್ದಲ್ಲದೆ, ಮುಸ್ಲಿಂ ಅರ್ಜಿದಾರರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿತ್ತು.
ಅದರಂತೆ, ಅಂಜುಮಾನ್ ಇಂತೇಜಾಮಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಸಮೀಕ್ಷೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿತ್ತು. ಬಳಿಕ ಅಲಹಾಬಾದ್ ಹೈಕೋರ್ಟ್ ಸಮೀಕ್ಷೆಗೆ ಅನುಮತಿ ನೀಡಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಂಜುಮಾನ್ ಇಂತೇಜಾಮಿಯಾ ಸಲ್ಲಿಸಿದ ಅರ್ಜಿಯನ್ನು ಶುಕ್ರವಾರ (ಆಗಸ್ಟ್ 4) ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಸಮೀಕ್ಷೆಗೆ ಅನುಮತಿ ನೀಡಿದೆ.
ಇದನ್ನೂ ಓದಿ: Gyanvapi Case: ಮುಸ್ಲಿಮರು ಐತಿಹಾಸಿಕ ಪ್ರಮಾದವನ್ನು ಒಪ್ಪಿಕೊಳ್ಳಲಿ: ಜ್ಞಾನವಾಪಿ ಬಗ್ಗೆ ಯುಪಿ ಸಿಎಂ ಯೋಗಿ
ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿ ಹಿಂದು ಮಹಿಳೆಯರು 2021ರಲ್ಲಿ ವಾರಾಣಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಬಳಿಕ ನ್ಯಾಯಾಲಯವು ಮಸೀದಿಯಲ್ಲಿ ವಿಡಿಯೊ ಸಮೀಕ್ಷೆಗೆ ಅನುಮತಿ ನೀಡಿತ್ತು. ಈಗಾಗಲೇ, ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆ ಮುಗಿದಿದ್ದು, ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗ ಪತ್ತೆಯಾದ ಕಾರಣ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಲಾಗಿದೆ.