ನವ ದೆಹಲಿ: ಬಿಜೆಪಿಯ ರಾಷ್ಟ್ರೀಯ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿದ್ದಾರೆ.
ಮಧ್ಯಾಹ್ನ ದೆಹಲಿಗೆ ಆಗಮಿಸಿದ ಅವರು ನಿಗದಿತ ಕಾರ್ಯಕ್ರಮದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪಕ್ಷದಲ್ಲಿನ ಉನ್ನತ ಹುದ್ದೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳ ಕುರಿತೂ ಮೋದಿ ಯಡಿಯೂರಪ್ಪರಿಂದ ಮಾಹಿತಿ ಪಡೆದುಕೊಂಡಿದ್ದು, ಚುನಾವಣೆ ಎದುರಿಸುವ ಕುರಿತು ಚರ್ಚಿಸಿದ್ದಾರೆಂದು ಹೇಳಲಾಗಿದೆ.
ನಂತರ ಯಡಿಯೂರಪ್ಪ ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾರನ್ನೂ ಭೇಟಿಯಾಗಿ ಚರ್ಚಿಸಿದ್ದಾರೆ. ಈ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಕರ್ನಾಟಕದಲ್ಲಿ ಚುನವಾಣೆ ನಡೆಯಲಿರುವುದರಿಂದ ತಮ್ಮ ಹೆಚ್ಚಿನ ಸಮಯವನ್ನು ರಾಜ್ಯಕ್ಕೆ ನೀಡಬೇಕೆಂದು ಪ್ರಧಾನಿ ಮೋದಿ ಮತ್ತು ಪಕ್ಷದ ಅಧ್ಯಕ್ಚ ನಡ್ಡಾರಲ್ಲಿ ಕೋರಿದ್ದು, ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ಅಧ್ಯಕ್ಷರೊಂದಿಗೆ ಚರ್ಚಿಸಲಾಯಿತೇ ಎಂಬ ಪ್ರಶ್ನೆಗೆ “ಇಲ್ಲ, ಇದು ಪಕ್ಷ ಹೈಕಮಾಂಡ್‌ಗೆ ಬಿಟ್ಟ ವಿಷಯʼʼ ಎಂದು ಯಡಿಯೂರಪ್ಪ ಉತ್ತರಿಸಿದ್ದಾರೆ. ಸೆ. ೨ರಂದು ಪ್ರಧಾನಿ ಮೋದಿಯವರ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಲಿದ್ದು, ಇದನ್ನು ಯಶಸ್ವಿಗೊಳಿಸಲು ಪಕ್ಷ ಸಕಲ ಸಿದ್ಧತೆ ಮಾಡಿಕೊಳ್ಳಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾರನ್ನೂ ಇಂದು ರಾತ್ರಿ ಭೇಟಿಯಾಗುವ ಉದ್ದೇಶವಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರೊಂದಿಗೂ ಯಡಿಯೂರಪ್ಪ ಸಮಾಲೋಚನೆ ನಡೆಸಿದ್ದಾರೆ.
ಶುಕ್ರವಾರ ರಾತ್ರಿ ಅವರು ಕರ್ನಾಟಕ ಭವನದಲ್ಲಿ ಉಳಿದುಕೊಳ್ಳಲಿದ್ದು, ಶನಿವಾರ ಬೆಳಗ್ಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ಕರ್ನಾಟಕದಲ್ಲಿ ಪಕ್ಷದ ಸಂಘಟನೆಯ ಜವಾಬ್ದಾರಿ ಹೊತ್ತಿರುವ ಬಿ ಎಸ್ ಯಡಿಯೂರಪ್ಪ, ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಆಗಬೇಕಾಗಿರುವ ಬದಲಾವಣೆಗಳ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ| ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಸುಳಿವು ನೀಡಿದ ಬಿ.ಎಸ್. ಯಡಿಯೂರಪ್ಪ