Site icon Vistara News

Kashmir Accident: ಕಾಶ್ಮೀರದಲ್ಲಿ ಬಸ್‌ ಕಣಿವೆಗೆ ಬಿದ್ದು 38 ಜನ ಸಾವು, ಮೋದಿ ಕಂಬನಿ

Jammu Kashmir Accident

ಶ್ರೀನಗರ: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ (Doda District) ಭೀಕರ ಅಪಘಾತ (Kashmir Accident) ಸಂಭವಿಸಿದೆ. ಸುಮಾರು 55 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಒಂದು 300 ಅಡಿ ಆಳದ ಕಣಿವೆಗೆ ಬಿದ್ದಿದ್ದು, 38 ಜನ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸುತ್ತಲೇ ಜನರ ರಕ್ಷಣೆಗೆ ಭದ್ರತಾ ಸಿಬ್ಬಂದಿ ಆಗಮಿಸಿದ್ದು, ಜನರನ್ನು ರಕ್ಷಿಸಲಾಗುತ್ತಿದೆ. ಹಲವು ಜನರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ಸಾರ್‌ ಪ್ರದೇಶದ ತ್ರುಂಗಲ್‌ ಬಳಿ ಚಲಿಸುತ್ತಿದ್ದ ಬಸ್‌ ಕಂದಕಕ್ಕೆ ಉರುಳಿದೆ. ಕಿಶ್ತ್‌ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿದೆ. “ಬಸ್‌ ನಿಧಾನವಾಗಿ ಚಲಿಸುತ್ತಿದ್ದರೂ ಇಕ್ಕಟ್ಟಾದ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಹಾಗಾಗಿ, ಸುಮಾರು 300 ಅಡಿ ಆಳದ ಕಣಿವೆಗೆ ಬಿದ್ದಿದೆ. ಇದರಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಗಾಯಗೊಂಡವರಲ್ಲಿ ಕೆಲವ ಪರಿಸ್ಥಿತಿ ತುಂಬ ಗಂಭೀರವಾಗಿದೆ” ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪೊಲೀಸರು, ರಕ್ಷಣಾ ಪಡೆಗಳು ಕೂಡಲೇ ಸ್ಥಳಕ್ಕೆ ಧಾವಿಸಿದರೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇನ್ನೂ ಕೆಲವರನ್ನು ಆಂಬುಲೆನ್ಸ್‌ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 300 ಅಡಿ ಆಳದ ಕಣಿವೆಗೆ ಬಿದ್ದ ಕಾರಣ ಜನರ ರಕ್ಷಣೆಯೂ ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಮೋದಿ ಸಂತಾಪ, ಪರಿಹಾರ ಘೋಷಣೆ

ಜಮ್ಮು-ಕಾಶ್ಮೀರದಲ್ಲಿ ಅಪಘಾತ ಸಂಭವಿಸಿ, 38 ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. “ದೋಡಾ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು” ಎಂದು ನರೇಂದ್ರ ಮೋದಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Road Accident : ಅಪಘಾತ ತಪ್ಪಿಸಲು ಹೋಗಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ರೂಸರ್‌; ಮೂವರು ದಾರುಣ ಸಾವು

ಅಪಘಾತದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಜನರ ರಕ್ಷಣೆಗೆ ಸಕಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅಪಘಾತಗಳಲ್ಲಿ ಇದೂ ಒಂದಾಗಿದೆ ಎಂದು ಹೇಳಲಾಗುತ್ತಿದೆ.

Exit mobile version