ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ (Kolkata Doctor Murder Case)ಯನ್ನು ಖಂಡಿಸಿ ದೇಶಾದ್ಯಂತ ವೈದ್ಯರು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾರತೀಯ ವೈದ್ಯಕೀಯ ಸಂಘ (Indian Medical Association) ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ನಿಲ್ಲಿಸಲಿ ನೀಡಿರುವ ಕರೆಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಹೀಗಾಗಿ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದೆಲ್ಲ ವೈದ್ಯಕೀಯ ಸೇವೆ ಸ್ಥಗಿತಗೊಂಡಿದೆ. ಪ್ರಸ್ತುತ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Ministry of health and family welfare) ಶನಿವಾರ ಪ್ರತಿಭಟನಾನಿರತ ವೈದ್ಯರಲ್ಲಿ ಮನವಿ ಮಾಡಿದೆ.
ಭಾರತೀಯ ವೈದ್ಯಕೀಯ ಸಂಘದ ಮನವಿಯಂತೆ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲು ಸಮಿತಿಯನ್ನು ರಚಿಸುವುದಾಗಿ ಸಚಿವಾಲಯ ಭರವಸೆ ನೀಡಿದೆ. ಸಮಿತಿಗೆ ತಮ್ಮ ಸಲಹೆಗಳನ್ನು ನೀಡಲು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದೂ ತಿಳಿಸಿದೆ.
#HealthForAll
— Ministry of Health (@MoHFW_INDIA) August 17, 2024
Union Health Ministry assures Doctors of all possible efforts to ensure safety.
A committee to be formed to suggest measures for ensuring the safety of healthcare professionals. https://t.co/AKVCmsRJFG
ಆರೋಗ್ಯ ಸಚಿವಾಲಯ ಹೇಳಿದ್ದೇನು?
ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ಸ್ (FORDA), ಭಾರತೀಯ ವೈದ್ಯಕೀಯ ಸಂಘ (IMA) ಮತ್ತು ದೆಹಲಿಯ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (Resident Doctors’ Associations of Government Medical Colleges and Hospitals in Delhi)ನ ಪ್ರತಿನಿಧಿಗಳ ಬೇಡಿಕೆಗಳನ್ನು ಆಲಿಸಿದ್ದೇವೆ. ವೈದ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ. 26 ರಾಜ್ಯಗಳು ಈಗಾಗಲೇ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಜಾರಿಗೆ ತಂದಿವೆ ಎಂದೂ ತಿಳಿಸಿದೆ. ಹೀಗಾಗಿ ಕೂಡಲೇ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದೆ.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನನ್ನು ಒದಗಿಸುತ್ತಿದ್ದಾರೆ.
ಏನಿದು ಘಟನೆ?
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.
ಇದನ್ನೂ ಓದಿ: Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?