Site icon Vistara News

Kolkata Doctor Murder case: ಮಮತಾ ಬ್ಯಾನರ್ಜಿ ಹತ್ಯೆಗೆ ಪ್ರಚೋದಿಸಿ ಪೋಸ್ಟ್‌- ವಿದ್ಯಾರ್ಥಿನಿ ಅರೆಸ್ಟ್‌

Kolkata Doctor Murder case

ಕೋಲ್ಕತಾ: ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor Murder case) ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ(West Bengal chief minister) ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಮತ್ತು ಬೆದರಿಕೆ ಹಾಕಿರುವ ಪೋಸ್ಟ್‌ವೊಂದನ್ನು ಮಾಡಿದ್ದ ವಿದ್ಯಾರ್ಥಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಈಕೆ ತನ್ನ kirtisocial ಎಂಬ ತನ್ನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಹತ್ಯೆಗೆ ಕರೆ ನೀಡಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಹತ್ಯೆಯನ್ನು ನೆನಪಿಸುವ ರೀತಿಯಲ್ಲಿ ಮಮತಾ ಬ್ಯಾನರ್ಜಿಯನ್ನು ಹತ್ಯೆ ಮಾಡಿ ಎಂದು ಪೋಸ್ಟ್‌ ಮಾಡಿದ್ದಾಳೆ ಎನ್ನಲಾಗಿದೆ.

ಕೀರ್ತಿ ಶರ್ಮಾ ವಿರುದ್ಧ ತಾಲ್ತಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಅರೆಸ್ಟ್‌ ಮಾಡಲಾಗಿದೆ. ಕೀರ್ತಿ ಒಟ್ಟು ಮೂರು ಪೋಸ್ಟ್‌ಗಳನ್ನು ಮಾಡಿದ್ದು, ಒಂದು ಪೋಸ್ಟ್‌ನಲ್ಲಿ ಮೃತ ವೈದ್ಯೆಯ ಗುರುತು ಬಹಿರಂಗ ಪಡಿಸಿದ್ದಾರೆ. ಮತ್ತೆರಡು ಪೋಸ್ಟ್‌ನಲ್ಲಿ ಮಮತಾ ಬ್ಯಾನರ್ಜಿಯವರಿಗೆ ಬೆದರಿಕೆವೊಡ್ಡಿದ್ದಾರೆ ಎಂದು ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌(Supreme Court) ಮಧ್ಯಪ್ರದೇಶ ಮಾಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಏನಿದು ಘಟನೆ?

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ

ಇದನ್ನೂ ಓದಿ: Kolkata Doctor murder case: ಟ್ರೈನಿ ವೈದ್ಯೆ ಕೊಲೆ ಪ್ರಕರಣ; ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌

Exit mobile version