Site icon Vistara News

Uniform Civil Code: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ; ಅಭಿಪ್ರಾಯ ಸಂಗ್ರಹಕ್ಕೆ ಕೇಂದ್ರ ಕ್ರಮ

Uniform Civil Code

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ (Uniform Civil Code) ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿ ಕುರಿತು 22ನೇ ಭಾರತೀಯ ಕಾನೂನು ಆಯೋಗವು ಜನರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ದೇಶದ ನಾಗರಿಕರು, ಪ್ರಮುಖ ಧಾರ್ಮಿಕ ಸಂಸ್ಥೆಗಳು ಏಕರೂಪ ನಾಗರಿಕ ಸಂಹಿತೆ ಕುರಿತು 30 ದಿನಗಳಲ್ಲಿ ಅಭಿಪ್ರಾಯ ಸಲ್ಲಿಸಬೇಕು ಎಂದು ಕಾನೂನು ಆಯೋಗ ಸೂಚಿಸಿದೆ.

ದೇಶದ ನ್ಯಾಯಾಲಯಗಳು ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿಯೇ ಸಿದ್ಧ ಎಂದು ಈಗಾಗಲೇ ಹೇಳಿದ್ದಾರೆ. ಇದರ ಬೆನ್ನಲ್ಲೇ, ಕಾನೂನು ಆಯೋಗವು ಸಾರ್ವಜನಿಕರಿಂದ, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವುದು ಪ್ರಮುಖ ವಿಷಯವಾಗಿದೆ. ಜನ ಹಾಗೂ ಧಾರ್ಮಿಕ ಸಂಸ್ಥೆಗಳ ಸಹಮತದೊಂದಿಗೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಆಯೋಗ ಮುಂದಾಗಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಜಾತಿ, ಧರ್ಮ, ಪಂಥಗಳ ಭೇದ-ಭಾವ ಇಲ್ಲದೆ, ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂಬುದೇ ಏಕರೂಪ ನಾಗರಿಕ ಸಂಹಿತೆಯಾಗಿದೆ. ಸಂವಿಧಾನದ 44ನೇ ವಿಧಿಯು ಕೂಡ ಏಕರೂಪ ನಾಗರಿಕ ಸಂಹಿತೆ ಇರಬೇಕು ಎಂದು ಹೇಳುತ್ತದೆ. ಹಾಗಾಗಿ, ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಎಂದು 2019ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಆದರೆ, ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದರೆ ಮುಸ್ಲಿಮರಲ್ಲಿರುವ ಬಹುಪತ್ನಿತ್ವದಂತಹ ಪದ್ಧತಿಗಳು ಕೊನೆಗೊಳ್ಳುತ್ತವೆ. ಎಲ್ಲರಿಗೂ ಒಂದೇ ಕಾನೂನು ಜಾರಿಗೆ ಬರುತ್ತದೆ. ಇದಕ್ಕಾಗಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬಾರದು ಎಂದು ಹಲವು ಧಾರ್ಮಿಕ ಸಂಸ್ಥೆಗಳು, ರಾಜಕಾರಣಿಗಳ ಒತ್ತಾಯವಾಗಿದೆ.

ಇದನ್ನೂ ಓದಿ: Congress Guarantee: ಅನ್ನಭಾಗ್ಯ ಅಕ್ಕಿಗೆ ಕೇಂದ್ರ ಸರ್ಕಾರದ ಕೊಕ್ಕೆ!: ಗ್ಯಾರಂಟಿ ಫೇಲ್‌ ಮಾಡಲು ಷಡ್ಯಂತ್ರ ಎಂದ ಸಿಎಂ ಸಿದ್ದರಾಮಯ್ಯ

ನೀವೂ ಅಭಿಪ್ರಾಯ ತಿಳಿಸಬಹುದು

ಜನರು ಹಾಗೂ ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯ ಪಡೆದುಕೊಂಡೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ತೀರ್ಮಾನಿಸಿದ ಕಾರಣ ಸಾಮಾನ್ಯ ಜನರು ಕೂಡ ಸಂಹಿತೆ ಜಾರಿ ಕುರಿತಂತೆ ಅಭಿಪ್ರಾಯ ಸಲ್ಲಿಸಬಹುದಾಗಿದೆ. ಭಾರತೀಯ ಕಾನೂನು ಆಯೋಗದ membersecretary-lci@gov.inಗೆ ಇ-ಮೇಲ್‌ ಮಾಡುವ ಮೂಲಕ ನಿಮ್ಮ ಅಭಿಪ್ರಾಯವನ್ನೂ ದಾಖಲಿಸಬಹುದು. ಅಂದಹಾಗೆ, ನೀವು ಅಭಿಪ್ರಾಯ ತಿಳಿಸಲು 30 ದಿನ ಮಾತ್ರ ಕಾಲಾವಕಾಶವಿದೆ. ಅಧಿಸೂಚನೆ ಹೊರಡಿಸಲಾದ 30 ದಿನಗಳೊಳಗೆ ಅಭಿಪ್ರಾಯ ಸಲ್ಲಿಸಬಹುದು.

ದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Exit mobile version