ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ(Parliament Sessions)ದ ಮೂರನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಇಂದು ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾ(Om Birla) ಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್ ಆಗಿ ಚುನಾಯಿತ(Lok Sabha Speaker)ರಾಗಿದ್ದಾರೆ. ಚುನಾಯಿತರಾದ ಬಳಿಕ ಮೊದಲ ಬಾರಿಗೆ ಸಂಸತ್‌ನಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭವನ್ನು ಪ್ರಸ್ತಾಪಿಸಿದರು.
ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಓಂ ಬಿರ್ಲಾ, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದರು. ಆ ಸಂದರ್ಭದಲ್ಲಿ ಜನರಿಗಾದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮಾತನಾಡಿದರು. ಅಲ್ಲದೇ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ ಹಿನ್ನೆಲೆ ಎರಡು ದಿನ ಮೌನಾಚರಣೆಗೆ ಕರೆ ನೀಡಿದರು. ಇದರ ಬೆನ್ನಲ್ಲೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಕಲಾಪನ್ನು ಮುಂದೂಡಲಾಯಿತು. ಸರ್ವಾಧಿಕಾರವನ್ನು ನಿಲ್ಲಿಸಿ.. ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಘೋಷಣೆ ಕೂಗಿದರು.
ಇದಾದ ಬಳಿಕ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ ಓಂ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೌರವಾನ್ವಿತ ಸಭಾಧ್ಯಕ್ಷರು ತುರ್ತು ಪರಿಸ್ಥಿತಿಯನ್ನು ಬಲವಾಗಿ ಖಂಡಿಸಿದ್ದು, ಆ ಸಮಯದಲ್ಲಿ ಮಾಡಿದ ಅತಿರೇಕ ವರ್ತನೆ ಮತ್ತು ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದ ರೀತಿಯನ್ನು ಪ್ರಸ್ತಾಪಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಆ ದಿನಗಳಲ್ಲಿ ನಡೆದ ಹಿಂಸಾಚಾರ ಖಂಡಿಸಿ ನಡೆಸಲಾದ ಮೌನಾಚರಣೆಯನ್ನು ನಾವು ಪ್ರಶಂಸಿಸುತ್ತೇವೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
I am glad that the Honourable Speaker strongly condemned the Emergency, highlighted the excesses committed during that time and also mentioned the manner in which democracy was strangled. It was also a wonderful gesture to stand in silence in honour of all those who suffered…
— Narendra Modi (@narendramodi) June 26, 2024
18ನೇ ಲೋಕಸಭೆಯ ಸ್ಪೀಕರ್ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.
ಇದನ್ನೂ ಓದಿ: CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ