ಲಕ್ನೋ: ಉತ್ತರ ಪ್ರದೇಶದ ಕಾಸ್ಗಂಜ್ (Kasganj) ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ (Major Accident) ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು ಈ ದುರಂತ ಸಂಭವಿಸಿದೆ. ಮಾಘ ಪೂರ್ಣಿಮೆ (Magh Purnima)ಯ ಪ್ರಯುಕ್ತ ಗಂಗಾ ನದಿಯಲ್ಲಿನ ಪವಿತ್ರ ಸ್ನಾನಕ್ಕಾಗಿ ಗ್ರಾಮಸ್ಥರು ತೆರಳುತ್ತಿದ್ದಾಗ ಈ ಅವಘಢ ಸಂಭವಿಸಿದೆ.
ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲಿಗಢ ವಲಯದ ಐಜಿ ಶಲಭ್ ಮಾಥುರ್ ಮಾಹಿತಿ ನೀಡಿದ್ದಾರೆ. ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಟ್ರ್ಯಾಕ್ಟರ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದ ಎಂದು ಅವರು ತಿಳಿಸಿದ್ದಾರೆ.
ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಕೆಸರು ತುಂಬಿದ ಕೊಳಕ್ಕೆ ಪಲ್ಟಿಯಾಗಿದ್ದರಿಂದ ಹೆಚ್ಚಿನ ಸಾವು ನೋವು ಸಂಭವಿಸಿದೆ. ಗಾಯಗೊಂಡವರನ್ನು ಕಾಸ್ಗಂಜ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಆಘಾತ ವ್ಯಕ್ತಪಡಿಸಿದ ಯೋಗಿ
ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದಾರೆ. ತೀವ್ರ ದುಃಖ ವ್ಯಕ್ತಪಡಿಸಿದ ಅವರು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತ ಮತ್ತು ಸಮರ್ಪಕ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಸ್ಗಂಜ್ ಜಿಲ್ಲೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ತ್ವರಿತ ರಕ್ಷಣಾ ಕಾರ್ಯಾಚರಣೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ: Road Accident: ರಾಯಬಾಗದಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರ ಸಾವು