ನವದೆಹಲಿ/ಇಂಫಾಲ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿದ ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆಗೆ ವಹಿಸಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೊ (Manipur Video) ವೈರಲ್ ಆಗಿ, ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹಾಗಾಗಿ, ಪ್ರಕರಣದ ಗಂಭೀರತೆ ಅರಿತ ಕೇಂದ್ರ ಸರ್ಕಾರವು ಸಿಬಿಐ ತನಿಖೆಗೆ ವಹಿಸಿದೆ.
ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ ಮಣಿಪುರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ, ಕೇಂದ್ರ ಗೃಹ ಸಚಿವಾಲಯವು ಪ್ರಕರಣವನ್ನು ಸಿಬಿಐ ತೆಕ್ಕೆ ನೀಡಿದೆ. ಇನ್ನು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಏಳು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಹಾಗೆಯೇ, ನೂರಾರು ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಮೆರವಣಿಗೆಯನ್ನು ವಿಡಿಯೊ ಮಾಡಿದ್ದ ಆರೋಪಿಯನ್ನೂ ಇತ್ತೀಚೆಗೆ ಬಂಧಿಸಲಾಗಿದೆ.
ಇದನ್ನೂ ಓದಿ: Manipur Violence: ಮಾತುಕತೆಯ ಮೇಜಿಗೆ ಬಂದ ಮೈತಿ, ಕುಕಿ ಸಂಘಟನೆಗಳು
ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಸಾವಿರಾರು ಜನ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಾರೆ. ಇದಾದ ಬಳಿಕ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಹಿಳೆಯೊಬ್ಬರ ಸಹೋದರನನ್ನು ಕೊಲೆ ಮಾಡಿದ್ದಾರೆ. ನಮ್ಮ ಮೇಲೂ ಹಲ್ಲೆಯಾಗಿದೆ ಎಂದು ಮಹಿಳೆಯರ ಕುಟುಂಬಸ್ಥರು ತಿಳಿಸಿದ್ದಾರೆ. ಮೇ 4ರಂದೇ ಘಟನೆ ನಡೆದಿದ್ದು, ಇದುವರೆಗೆ ಕ್ರಮ ತೆಗೆದುಕೊಳ್ಳದಿರುವ ಕುರಿತು ಭಾರಿ ಆಕ್ರೋಶ ವ್ಯಕ್ತವಾಗಿದೆ.
ಮಣಿಪುರದಲ್ಲಿ ಕುಕಿ ಹಾಗೂ ಮೈತೈ ಸಮುದಾಯಗಳ ಮಧ್ಯೆ ಮೇ 3ರಿಂದಲೂ ಹಿಂಸಾಚಾರ ಭುಗಿಲೆದ್ದಿದೆ. ಇದುವರೆಗೆ ಮಣಿಪುರದಲ್ಲಿ ನಡೆದ ಹಿಂಸಾಚಾರಗಳಿಂದ ಸುಮಾರು 150 ಜನ ಮೃತಪಟ್ಟಿದ್ದು, ಸಾವಿರಾರು ಜನ ಗಾಯಗೊಂಡಿದ್ದಾರೆ. ಮಣಿಪುರ ಬಿಕ್ಕಟ್ಟಿನ ಕುರಿತು ಮಾತುಕತೆಗೆ ಸಿದ್ಧ ಎಂದು ಈಗಾಗಲೇ ಕೇಂದ್ರ ಸರ್ಕಾರ ತಿಳಿಸಿದರೂ ಹಿಂಸಾಚಾರ ನಿಲ್ಲುತ್ತಿಲ್ಲ. ಅಲ್ಲದೆ, ಮಣಿಪುರ ಹಿಂಸಾಚಾರ ಪ್ರಕರಣವು ಸಂಸತ್ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ.