ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಪ್ರಕರಣದ (Manipur Video) ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಕರಣವನ್ನು ಈಗಾಗಲೇ ಸಿಬಿಐ ತನಿಖೆಗೆ ವಹಿಸಲಾಗಿದೆ. ಇದರ ಬೆನ್ನಲ್ಲೇ, ದೌರ್ಜನ್ಯಕ್ಕೀಡಾದ ಇಬ್ಬರು ಮಹಿಳೆಯರು ಕೇಂದ್ರ ಹಾಗೂ ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಸೋಮವಾರ (July 31) ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
“ನಮ್ಮ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ನಮಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಪ್ರಕರಣದ ಕುರಿತು ನಿಖರ ಹಾಗೂ ಪಾರದರ್ಶಕ ತನಿಖೆಯಾಗಬೇಕು. ಈ ಕುರಿತು ನ್ಯಾಯಾಲಯವು ಸುಮೋಟೊ (ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಳ್ಳುವುದು) ದಾಖಲಿಸಿಕೊಂಡು ನಮಗೆ ನ್ಯಾಯ ಒದಗಿಸಬೇಕು” ಎಂದು ಇಬ್ಬರು ಮಹಿಳೆಯರು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ, ಮಣಿಪುರ ವಿಡಿಯೊ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದು, ಆ ಕುರಿತು ಕೂಡ ಸೋಮವಾರವೇ ವಿಚಾರಣೆ ನಡೆಯಲಿದೆ.
ನಿಷ್ಪಕ್ಷಪಾತ ತನಿಖೆಯ ಜತೆಗೆ, ತಮ್ಮ ಗುರುತು ಬಹಿರಂಗವಾಗದಂತೆ ಕೂಡ ಕ್ರಮ ತೆಗೆದುಕೊಳ್ಳಬೇಕು. ಯಾರಿಗೂ ತಮ್ಮ ವೈಯಕ್ತಿಕ ಮಾಹಿತಿ ತಿಳಿಯದಂತಾಗಬೇಕು ಎಂದು ಕೂಡ ಮಹಿಳೆಯರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 4ರಂದು ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಅವರನ್ನು ಮೆರವಣಿಗೆ ಮಾಡಿದ ಹೀನ ಕೃತ್ಯ ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದರೂ ದೇಶಾದ್ಯಂತ ಭಾರಿ ಸುದ್ದಿಯಾಗಿದೆ.
ಇದನ್ನೂ ಓದಿ: Manipur Video: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ; ಸಿಬಿಐ ತನಿಖೆಗೆ ವಹಿಸಿದ ಕೇಂದ್ರ ಸರ್ಕಾರ
ಮಣಿಪುರದಲ್ಲಿ ಕುಕಿ ಹಾಗೂ ಮೈತೈ ಸಮುದಾಯಗಳ ಮಧ್ಯೆ ಮೇ 3ರಿಂದಲೂ ಹಿಂಸಾಚಾರ ಭುಗಿಲೆದ್ದಿದೆ. ಇದುವರೆಗೆ ಮಣಿಪುರದಲ್ಲಿ ನಡೆದ ಹಿಂಸಾಚಾರಗಳಿಂದ ಸುಮಾರು 150 ಜನ ಮೃತಪಟ್ಟಿದ್ದು, ಸಾವಿರಾರು ಜನ ಗಾಯಗೊಂಡಿದ್ದಾರೆ. ಮಣಿಪುರ ಬಿಕ್ಕಟ್ಟಿನ ಕುರಿತು ಮಾತುಕತೆಗೆ ಸಿದ್ಧ ಎಂದು ಈಗಾಗಲೇ ಕೇಂದ್ರ ಸರ್ಕಾರ ತಿಳಿಸಿದರೂ ಹಿಂಸಾಚಾರ ನಿಲ್ಲುತ್ತಿಲ್ಲ. ಅಲ್ಲದೆ, ಮಣಿಪುರ ಹಿಂಸಾಚಾರ ಪ್ರಕರಣವು ಸಂಸತ್ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ.