Site icon Vistara News

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

Narendra Modi

PM Narendra Modi dials UK counterpart Keir Starmer, extends invite to visit India

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಇಂದು (ಜೂನ್‌ 9) ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಜವಾಹರ ಲಾಲ್‌ ನೆಹರು ಅವರ ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಖ್ಯಾತಿಗೆ ಭಾಜನರಾಗಲಿದ್ದಾರೆ. ಇಂದು ಸಂಜೆ 7.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ಜತೆಗೆ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಹಾಗಾದರೆ, ಇಡೀ ದಿನ ಏನೆಲ್ಲ ಕಾರ್ಯಕ್ರಮ ನಡೆಯಲಿವೆ? ಮೋದಿ ಏನೆಲ್ಲ ಮಾಡಲಿದ್ದಾರೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

ಗಾಂಧೀಜಿ ಸಮಾಧಿ ಸ್ಥಳಕ್ಕೆ ಭೇಟಿ

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಮೊದಲು ಮಹಾತ್ಮ ಗಾಂಧೀಜಿ ಅವರ ಸಮಾಧಿಸ್ಥಳವಾದ ರಾಜ್‌ಘಾಟ್‌ಗೆ ತೆರಳಿ ನಮನ ಸಲ್ಲಿಸಲಿದ್ದಾರೆ. ಇದಾದ ನಂತರ ತಮ್ಮ ರಾಜಕೀಯ ಗುರುವಾದ ಅಟಲ್‌ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳವಾದ ಸದೈವ ಅಟಲ್‌ಗೆ ಭೇಟಿ ನೀಡಿ, ಅವರಿಗೆ ಪುಷ್ಪನಮನ ಸಲ್ಲಿಸಲಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಭವನ ಸಜ್ಜು

ಸಂಜೆ 7.15ಕ್ಕೆ ಕಾರ್ಯಕ್ರಮ

ಭಾನುವಾರ ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ. ಸುಮಾರು 8 ಸಾವಿರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಸಚಿವರಾಗಿ ಪ್ರಮಾಣವಚನ

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಜತೆಗೆ ಟಿಡಿಪಿಯ ರಾಮ್‌ ಮೋಹನ್‌ ನಾಯ್ಡು, ಲಾಲನ್‌ ಸಿಂಗ್‌, ಸಂಜಯ್‌ ಝಾ, ಜೆಡಿಯುನ ರಾಮನಾಥ್‌ ಠಾಕೂರ್‌, ಲೋಕ ಜನ ಶಕ್ತಿ ಪಕ್ಷದ ಚಿರಾಗ್‌ ಪಾಸ್ವಾನ್‌, ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿಗಿ ಬಂದೋಬಸ್ತ್‌

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೆಹಲಿಯ ಎಲ್ಲೆಡೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಸುಮಾರು 500 ಸಿಸಿಟಿವಿಗಳ ಕಣ್ಗಾವಲು ಇದೆ. ನೋ ಫ್ಲೈಯಿಂಗ್‌ ಜೋನ್‌ ಎಂದು ಘೋಷಿಸಿದ ಕಾರಣ ಯಾವುದೇ ಡ್ರೋನ್‌ಗಳ ಹಾರಾಟ ನಡೆಸುವಂತಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಷ್ಟ್ರಪತಿ ಭವನಕ್ಕೂ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Exit mobile version