Site icon Vistara News

NEET PG : ಪರೀಕ್ಷಾ ಅಕ್ರಮ; ನಾಳೆ ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

NEET-PG

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಜೂನ್ 23 ರಂದು ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು (NEET PG) ಏಕಾಏಕಿ ಮುಂದೂಡಲಾಗಿದೆ. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಗೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯ ಈ ನಿರ್ಧಾರ ಪ್ರಕಟಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದೂ ಹೇಳಿದೆ

ಪರೀಕ್ಷೆ ಒಂದು ದಿನ ಮೊದಲು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿದೆ.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: NEET UG Row : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮುಖ್ಯಸ್ಥರನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಆರೋಗ್ಯ ಸಚಿವಾಲಯವು ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಡಾರ್ಕ್​ನೆಟ್​​ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಯುಜಿಸಿ-ನೆಟ್ ರದ್ದುಗೊಳಿಸಿದ ನಂತರ ಮುಂದೂಡಲ್ಪಟ್ಟ ಎರಡನೇ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (UG) ಅಕ್ರಮಗಳು ನಡೆದಿವೆ ಎಂಬ ಆರೋಪದ ಬಗ್ಗೆಯೂ ವಿವಾದವಿದೆ.

ಒಂದು ದಿನದ ಹಿಂದೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25 ರಿಂದ ನಡೆಯಬೇಕಿದ್ದ ಸಿಎಸ್ಐಆರ್-ಯುಜಿಸಿ-ನೆಟ್ ಪರೀಕ್ಷೆಯನ್ನು ಅನಿವಾರ್ಯ ಸಂದರ್ಭಗಳಿಂದಾಗಿ ಮುಂದೂಡಲಾಗಿದೆ ಎಂದು ಘೋಷಿಸಿತ್ತು

Exit mobile version