ಪಾಟ್ನಾ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್ ಬಂಧನ ಆಗಿರುವ ಬೆನ್ನಲ್ಲೇ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಸಿಬಿಐ ಅರೆಸ್ಟ್ ಮಾಡಿದೆ. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ಇನ್ನು ಬಂಧಿತರನ್ನು ಪಂಕಜ್ ಕುಮಾರ್ ಮತ್ತು ರಾಜು ಸಿಂಗ್ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿ ಸಂಜೀವ್ ಮುಖಿಯಾ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪಂಕಜ್ ಕುಮಾರ್ 2017 ಬ್ಯಾಚ್‌ನ ಸಿವಿಲ್ ಎಂಜಿನಿಯರ್ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್ ಪದವಿ ಪಡೆದಿದ್ದಾನೆ. ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ. ಸದ್ಯ ಆತನನ್ನು ಪಾಟ್ನಾದಿಂದ ಅರೆಸ್ಟ್ ಮಾಡಲಾಗಿದೆ. ಕಾಗದವನ್ನು ಕದ್ದು ಇತರ ಗ್ಯಾಂಗ್ ಸದಸ್ಯರಿಗೆ ರವಾನಿಸಲು ಕುಮಾರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜು ಸಿಂಗ್‌ನನ್ನು ಸಿಬಿಐ ಬಂಧಿಸಿದೆ, ಸಿಂಗ್ ಅವರನ್ನು ಹಜಾರಿಬಾಗ್‌ನಿಂದ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ,
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಇದರ ಮಧ್ಯೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಹತ್ವದ ಮುನ್ನಡೆ ಸಾಧಿಸಿದ್ದು, ನೀಟ್ ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್ ಆಗಿರುವ ರಾಕೇಶ್ ರಂಜನ್ (Rakesh Ranjan) ಎಂಬಾತನನ್ನು ಬಂಧಿಸಿದ್ದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆಯೇ, ಬಿಹಾರದ ಪಟನಾದಲ್ಲಿ ಎರಡು ಕಡೆ ಹಾಗೂ ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಎರಡು ಕಡೆ ಸಿಬಿಐ ಅಧಿಕಾರಿಗಳು ಗುರುವಾರ (ಜುಲೈ 11) ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಿಹಾರದ ಪಟನಾದಲ್ಲಿ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಈತನನ್ನು ಕೋರ್ಟ್‌ಗೂ ಹಾಜರುಪಡಿಸಲಾಗಿದ್ದು, 10 ದಿನ ಸಿಬಿಐ ಕಸ್ಟಡಿಗೆ ನೀಡಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.
ಜುಲೈ 18ರಂದು ಸುಪ್ರೀಂ ಕೋರ್ಟ್ ವಿಚಾರಣೆ
ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಜುಲೈ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ. ನೀಟ್ ಅಕ್ರಮದ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವರದಿಗಳನ್ನು ಪಡೆದಿರುವ ಸುಪ್ರೀಂ ಕೋರ್ಟ್, ಜುಲೈ 18ರಂದು ವಿಚಾರಣೆ ನಡೆಸಲು ತೀರ್ಮಾನಿಸಿತು.
ಏನಿದು ಪ್ರಕರಣ?
ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.
ಇದನ್ನೂ ಓದಿ: Hit And Run Case: ಮುಂಬೈ ಹಿಟ್ ಆ್ಯಂಡ್ ರನ್ ಕೇಸ್; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ