ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿರುವ ಜತೆಗೆ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನೀಟ್ ವಿರುದ್ಧ ನಿರ್ಣಯವನ್ನೇ ಮಂಡಿಸಲಾಗಿದೆ. ಇದರ ಬೆನ್ನಲ್ಲೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕೃಿಗಳು, ಸ್ಫೋಟಕ ಮಾಹಿತಿ ಬಯಲಿಗೆಳೆದಿದ್ದಾರೆ. ಜಾರ್ಖಂಡ್‌ನ ಜಹಾರಿಬಾಗ್‌ನಲ್ಲಿರುವ (Hazaribagh) ಕಚೇರಿಯಿಂದಲೇ ಪ್ರಶ್ನೆಪತ್ರಿಕೆಯನ್ನು (NEET Paper Leak Case) ಕಳ್ಳತನ ಮಾಡಲಾಗಿದೆ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೌದು, ಹಜಾರಿಬಾಗ್‌ನಲ್ಲಿರುವ ಎನ್‌ಟಿಎ ಸಿಟಿ ಕೋಆರ್ಡಿನೇಟರ್ ಕಮ್ ಪ್ರಿನ್ಸಿಪಾಲ್ ಆಫ್ ಓಯಸಿಸ್ ಸ್ಕೂಲ್ ಮತ್ತು ಸೆಂಟರ್ ಸೂಪರಿಂಟೆಂಡೆಂಟ್ ಕಮ್ ವೈಸ್ ಪ್ರಿನ್ಸಿಪಾಲ್ ಆಫ್ ಓಯಸಿಸ್ ಸ್ಕೂಲ್‌ನಿಂದ ಅಧಿಕಾರಿಗಳ ಕಣ್ಣುತಪ್ಪಿಸಿ ಅಥವಾ ಅವರ ಮೌನಸಮ್ಮತಿಯ ಮಧ್ಯೆಯೇ ನೀಟ್ ಪ್ರಶ್ನೆಪತ್ರಿಕೆಯನ್ನು ಎಗರಿಸಲಾಗಿದೆ. ನೀಟ್ ಪರೀಕ್ಷೆ ನಡೆದ ಮೇ 5ರಂದು ಪಂಕಜ್ ಕುಮಾರ್ ಅಲಿಯಾಸ್ ಆದಿತ್ಯ ಅಲಿಯಾಸ್ ಸಾಹಿಲ್ ಎಂಬಾತನು ಪ್ರಶ್ನೆಪತ್ರಿಕೆಯನ್ನು ತೆಗೆದುಕೊಂಡು ಹೋಗಿ, ಹಣ ಕೊಟ್ಟವರಿಗೆ ಅದನ್ನು ಹಂಚಿಕೆ ಮಾಡಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.
ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: NEET UG 2024: ನೀಟ್ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?