ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ (Supreme Court), ಜುಲೈ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ. ನೀಟ್ ಅಕ್ರಮದ ಕುರಿತಂತೆ ಕೇಂದ್ರ ಸರ್ಕಾರ (Central Government) ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವರದಿಗಳನ್ನು ಪಡೆದಿರುವ ಸುಪ್ರೀಂ ಕೋರ್ಟ್, ಜುಲೈ 18ರಂದು ವಿಚಾರಣೆ ನಡೆಸಲು ತೀರ್ಮಾನಿಸಿತು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ನೀಡಿದ ಮಾಹಿತಿಯನ್ನು ಪಡೆದ ನ್ಯಾಯಾಲಯವು ಮೊದಲಿಗೆ ಜುಲೈ 15ರಂದು ವಿಚಾರಣೆ ನಡೆಸಲು ಬಯಸಿತ್ತು. ಆದರೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಜುಲೈ 15 ಹಾಗೂ 16ರಂದು ವೈಯಕ್ತಿಕ ಕಾರಣಗಳಿಂದಾಗಿ ಕೋರ್ಟ್‌ಗೆ ಹಾಜರಾಗುವುದಿಲ್ಲ ಎಂದು ತಿಳಿಸಿದರು. ಜುಲೈ 17ರಂದು ಮೊಹರಂ ಇರುವ ಕಾರಣ ನ್ಯಾಯಾಲಯವು ಜುಲೈ 18ಕ್ಕೆ ವಿಚಾರಣೆ ಮುಂದೂಡಿತು.
ಕೇಂದ್ರ ಸರ್ಕಾರ ಹೇಳಿದ್ದೇನು?
ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, “ನೀಟ್ ಪರೀಕ್ಷೆಯ ವೇಳೆ ಸಾಮೂಹಿಕ ನಡೆದಿಲ್ಲ. ಹಾಗಾಗಿ, ಮರು ಪರೀಕ್ಷೆಯ ಅವಶ್ಯಕತೆಯಿಲ್ಲ” ಎಂದು ಸ್ಪಷ್ಟಪಡಿಸಿದೆ. “ನೀಟ್ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ನಕಲು ನಡೆದಿಲ್ಲ. ನೀಟ್ ಪರೀಕ್ಷೆಯ ಕುರಿತು ಐಐಟಿಯು ವಿಶೇಷ ಡೇಟಾ ಬಿಡುಗಡೆ ಮಾಡಿದೆ. ನೀಟ್ ಪರೀಕ್ಷೆ ವೇಳೆ ಸಾಮೂಹಿಕವಾಗಿ ನಕಲು ನಡೆದಿಲ್ಲ ಎಂಬುದಾಗಿ ವರದಿ ತಿಳಿಸಿದೆ. ಹಾಗಾಗಿ, ನೀಟ್ ಪರೀಕ್ಷೆಯನ್ನು ಮತ್ತೆ ನಡೆಸುವ ಅವಶ್ಯಕತೆ ಇಲ್ಲ. ಸುಮಾರು 23 ಲಕ್ಷ ಮಕ್ಕಳಿಗೆ ಮತ್ತೆ ಪರೀಕ್ಷೆಯ ಹೊರೆಯನ್ನು ಹೊರೆಸುವುದು ಬೇಕಾಗಿಲ್ಲ” ಎಂಬುದಾಗಿ ಕೋರ್ಟ್‌ಗೆ ಕೇಂದ್ರ ಸರ್ಕಾರ ಮನವರಿಕೆ ಮಾಡಿದೆ.
ನೀಟ್ ರದ್ದತಿ ಕೋರಿ ಸಲ್ಲಿಸಿದ ಅರ್ಜಿಗಳನ್ನು ಜುಲೈ 8ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಹಾಗೂ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸಿಜೆಐ ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ತಿಳಿಸಿತ್ತು. ಹಾಗೆಯೇ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮದ ಕುರಿತಂತೆ ಮಹತ್ವದ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೀಟ್ ಮೂರು ನಿರ್ದೇಶನಗಳನ್ನು ನೀಡಿತ್ತು. ತನಿಖೆಯ ವರದಿ ನೀಡಬೇಕು ಎಂಬುದಾಗಿ ಸಿಬಿಐಗೂ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈಗ ಜುಲೈ 11ರಂದು ಅಂತಿಮ ವಿಚಾರಣೆ ನಡೆಸಿ, ತೀರ್ಪು ನೀಡಲಿದೆ.
ಕೇಂದ್ರ ಸಚಿವರ ಭೇಟಿಯಾದ ಅಭ್ಯರ್ಥಿಗಳು
ನೀಟ್ ಅಕ್ರಮದ ಹಿನ್ನೆಲೆಯಲ್ಲಿ ಹಲವು ವಿದ್ಯಾರ್ಥಿಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಗುರುವಾರ ಭೇಟಿಯಾದರು. ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ತರುವುದು, ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಹಾಗೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರವು ಪರೀಕ್ಷೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಧರ್ಮೇಂದ್ರ ಪ್ರಧಾನ್ ಅವರಿಗೆ ವಿದ್ಯಾರ್ಥಿಗಳು ಮನವಿ ಮಾಡಿದರು.
A group of students today met Union Education Minister Dharmendra Pradhan at his residence over the #NEET UG examination
— Nidhi Taneja (@NidhiTanejaa) July 11, 2024
– ANIpic.twitter.com/mMexUTQoKc
ಏನಿದು ಪ್ರಕರಣ?
ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.
ಇದನ್ನೂ ಓದಿ: NEET UG 2024: ನೀಟ್ ಪರೀಕ್ಷೆ ವೇಳೆ ಸಾಮೂಹಿಕ ನಕಲು ನಡೆದಿಲ್ಲ, ಮರುಪರೀಕ್ಷೆ ಬೇಕಿಲ್ಲ; ಸುಪ್ರೀಂ ಕೇಂದ್ರ ಸ್ಪಷ್ಟನೆ