ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು (Supreme Court), ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ. ಜುಲೈ 11ರಂದು ಅಂತಿಮ ವಿಚಾರಣೆ ನಡೆಯಲಿದ್ದು, ಅಂದಿನ ತೀರ್ಪು ಮಹತ್ವ ಪಡೆದಿದೆ.
ಹಾಗೆಯೇ, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಹಾಗೂ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸಿಜೆಐ ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ತಿಳಿಸಿತು. ಹಾಗೆಯೇ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮದ ಕುರಿತಂತೆ ಮಹತ್ವದ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೀಟ್ ಮೂರು ನಿರ್ದೇಶನಗಳನ್ನು ನೀಡಿದೆ. ಹಾಗೆಯೇ, ತನಿಖೆಯ ವರದಿ ನೀಡಬೇಕು ಎಂಬುದಾಗಿ ಸಿಬಿಐಗೂ ಸುಪ್ರೀಂ ಕೋರ್ಟ್ ಸೂಚಿಸಿದೆ.
ಎನ್‌ಟಿಎಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳು
- ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಯಾವಾಗ ಎಂಬುದರ ಮಾಹಿತಿ ಕೊಡಿ
- ಯಾವ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬುದರ ಮಾಹಿತಿ ಪ್ರತ್ಯೇಕವಾಗಿ ಇರಲಿ
- ಪ್ರಶ್ನೆಪತ್ರಿಕೆ ಸೋರಿಕೆಯಾದ ದಿನ ಹಾಗೂ ಪರೀಕ್ಷೆ ನಡೆದ ದಿನದ ನಡುವೆ ಎಷ್ಟು ಸಮಯದ ಅಂತರವಿತ್ತು ಎಂಬುದರ ಮಾಹಿತಿ ಕೊಡಿ
NEET-UG 2024 exam: Supreme Court observes that one thing is clear that leak (of question paper) has taken place. The question is, how widespread is the reach? The paper leak is an admitted fact. pic.twitter.com/qyfZQESMsx
— ANI (@ANI) July 8, 2024
ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೇಳಿದ್ದಿಷ್ಟು…
- ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ
- ಅಕ್ರಮ ನಡೆದಿರುವುದು ನೋಡಿದರೆ ನೀಟ್ ಪರೀಕ್ಷೆಯ ಘನತೆ, ಮೌಲ್ಯಕ್ಕೆ ಧಕ್ಕೆಯಾಗಿದೆ
- ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ನಮಗೆ ಎನ್‌ಟಿಎ ಹಾಗೂ ಸಿಬಿಐ ನಿಖರ ಮಾಹಿತಿ ನೀಡಬೇಕು
- ಹಾಗೊಂದು ವೇಳೆ, ಅಕ್ರಮ ಎಸಗಿದವರು ಯಾರೆಂಬುದು ಗೊತ್ತಾಗದಿದ್ದರೆ ಮರು ಪರೀಕ್ಷೆ ನಿಶ್ಚಿತ
ಏನಿದು ಪ್ರಕರಣ?
ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.
ಇದನ್ನೂ ಓದಿ: NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್